ಶಿಕ್ಷಣದಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಪ್ರಮೋದ್
ಉಡುಪಿ, ಜು.26: ಶಿಕ್ಷಣದಿಂದ ವ್ಯಕ್ತಿತ್ವ ನಿರ್ಮಾಣ ಹಾಗೂ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕೊಕ್ಕರ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಗಳಿಗೆ ಸೈಕಲ್ ವಿತರಿಸಿ ಅವರು ಮಾತನಾಡುತಿದ್ದರು. ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಆದ್ಯತೆ ನೀಡಿ. ವಿದ್ಯೆಗಿಂತ ಮಿಗಿಲಾದ ಸಂಪತ್ತಿಲ್ಲ ಎಂದರು.
ಎಲ್ಲ ಮಕ್ಕಳಿಗೂ ಶಾಲಾ ಕಲಿಕೆ ಲಭ್ಯವಾಗಲು ಬಿಸಿಯೂಟದಿಂದ ಶೂ ವಿತರಣೆವರೆಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯ ಗಳನ್ನು ಸದುಪಯೋಗ ಪಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಬಾಳಿ ಎಂದರು.
ಕೊಕ್ಕರ್ಣೆಗೆ ಈಗಾಗಲೇ ಐಟಿಐಯನ್ನು ಮಂಜೂರು ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆ ಆಸಕ್ತಿ ವಹಿಸದಿದ್ದರೆ ಬ್ರಹ್ಮಾವರಕ್ಕೆ ಐಟಿಐಯನ್ನು ವರ್ಗಾಯಿಸ ಲಾಗುವುದು ಎಂದು ಪ್ರಮೋದ್ ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯರಾದ ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷೆ ದೇವಕಿ ಕೋಟ್ಯಾನ್, ಶಾಲಾ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.