×
Ad

ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ : ಪ್ರಾಂಶುಪಾಲರ ಎತ್ತಂಗಡಿ

Update: 2017-07-27 18:46 IST

ಶಿವಮೊಗ್ಗ, ಜು. 27: ತಾಲೂಕಿನ ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ 30 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಎತ್ತಂಗಡಿ ಮಾಡಲಾಗಿದೆ.

’ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಗಾಜನೂರು ವಸತಿ ಶಾಲೆ ಪ್ರಾಂಶುಪಾಲರನ್ನು ಬೇರೆ ವಸತಿ ಶಾಲೆಗೆ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಆನವೇರಿ ವಸತಿ ಶಾಲೆಯ ಪ್ರಾಂಶುಪಾಲರ ನಿಯೋಜನೆ ಮಾಡಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಶಿವಕುಮಾರ್‌ರವರು ಗುರುವಾರ ನಗರದ ಜಿ.ಪಂ. ಕಚೇರಿ ಆವರಣದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಗಾಜನೂರು ವಸತಿ ಶಾಲೆಯ ಪ್ರಾಂಶುಪಾಲರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆಯೂ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಹಾಸ್ಟೆಲ್‌ಗೆ: ಕಳೆದ ಭಾನುವಾರ ರಾತ್ರಿ ಹಾಸ್ಟೆಲ್‌ನಲ್ಲಿ ವಿಷಪೂರಿತ ಆಹಾರ ಸೇವನೆಯಿಂದ 30 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ವಿದ್ಯಾರ್ಥಿನಿಯರು ಹಾಸ್ಟೆಲ್‌ಗೆ ಮರಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News