×
Ad

ಮ್ಯಾಜಿಸ್ಟ್ರೇಟ್ ಕೋರ್ಟ್‌ಗಳಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಲಿ: ಹೈಕೋರ್ಟ್

Update: 2017-07-28 21:22 IST

ಬೆಂಗಳೂರು, ಜು.28: ಮ್ಯಾಜಿಸ್ಟ್ರೇಟ್ ಕೋರ್ಟ್‌ಗಳು ಮುದ್ರಿತ ಪ್ರತಿಗಳಲ್ಲಿ ಆದೇಶ ಹೊರಡಿಸುವ ಪರಿಪಾಠವನ್ನು ಕೈಬಿಟ್ಟು ಕಂಪ್ಯೂಟರ್ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೈಕೋರ್ಟ್ ಹೇಳಿದೆ.
 

ಗ್ರಾಮ ಪಂಚಾಯತ್ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಅಧೀನ ನ್ಯಾಯಾಲಯಗಳ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದೆ. ಮುದ್ರಿತ ಆದೇಶ ಪ್ರತಿಗಳ ಬಳಕೆಯನ್ನು ನಿಲ್ಲಿಸಬೇಕು. ಕಂಪ್ಯೂಟರ್ ಬಳಕೆಗೆ ಆದ್ಯತೆ ನೀಡಬೇಕು ಎಂದು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಎಸ್.ಶಿವಾನಂದ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಸೋಮವಾರಪೇಟೆ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ತನ್ನ ಆದೇಶವನ್ನು ಪುನರ್ ಪರಿಶೀಲಿಸಬೇಕು ಎಂದೂ ನ್ಯಾಯಪೀಠ ನಿರ್ದೇಶಿಸಿದೆ. ಮುಳ್ಳುಸೋಗೆ ಗ್ರಾಮ ಪಂಚಾಯತಿಗೆ 2013-14ನೆ ಸಾಲಿನಲ್ಲಿ ನೀಡಲಾದ ಅನುದಾನದಲ್ಲಿ 49 ಲಕ್ಷಕ್ಕೂ ಹೆಚ್ಚು ಹಣ ದುರುಪಯೋಗ ಆಗಿದೆ. ಇದಕ್ಕೆ ಶಿವಾನಂದ ಅವರ ನಿರ್ಲಕ್ಷವೂ ಕಾರಣವಾಗಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇೀಟ್ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಅನ್ನು ಶಿವಾನಂದ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಅರ್ಜಿದಾರರ ಪರ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News