×
Ad

ಕುದುರೆ ವ್ಯಾಪಾರದ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

Update: 2017-07-29 19:14 IST

ಬೆಂಗಳೂರು, ಜು. 29: ಗುಜರಾತ್‌ನ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಹ್ಮದ್ ಪಟೇಲ್‌ಗೆ ಸೋಲು ನಿಶ್ಚಿತ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಶನಿವಾರ ನಗರದಲ್ಲಿ ಬಿಜೆಪಿ ಹಿಂದುಳಿದ ವರ್ಗ ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್‌ನ ರಾಜ್ಯಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ಪಕ್ಷ ಅಲ್ಲಿನ ಶಾಸಕರನ್ನು ಬೆಂಗಳೂರಿಗೆ ಕರೆತಂದು ರೆಸಾರ್ಟ್ ರಾಜಕೀಯ ನಡೆಸಿದೆ ಎಂದು ಟೀಕಿಸಿದರು.

ಗುಜರಾತ್‌ನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕುದುರೆ ವ್ಯಾಪಾರ ನಡೆಸಿಲ್ಲ. ದೇಶದೆಲ್ಲೆಡೆ ನರೇಂದ್ರಮೋದಿ ಅವರ ಗಾಳಿ ಬೀಸುತ್ತಿದೆ. ಅಲ್ಲಿನ 12-15 ಕಾಂಗ್ರೆಸ್‌ನ ಶಾಸಕರೇ ಬಿಜೆಪಿ ಸೇರುವ ತೀರ್ಮಾನ ಮಾಡಿದ್ದಾರೆ. ಹೀಗಿರುವಾಗ ಕುದುರೆ ವ್ಯಾಪಾರ ಪ್ರಶ್ನೆಯೇ ಇಲ್ಲ ಎಂದರು.
ಗುಜರಾತ್‌ನ ಈಗಿನ ರಾಜಕೀಯ ಸ್ಥಿತಿಯನ್ನು ಗಮನಿಸಿದರೆ ಕಾಂಗ್ರೆಸ್‌ನ ಅಹ್ಮದ್ ಪಟೇಲ್ ಸೋಲು ನಿಶ್ಚಿತ. ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, ಗುಜರಾತ್‌ನಲ್ಲಿ ಈಗ ತೀವ್ರ ನೆರೆ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗುಜರಾತಿನ ಕಾಂಗ್ರೆಸ್ ಶಾಸಕರು ಕರ್ನಾಟಕದ ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಆಂತರಿಕ ಜಗಳದಿಂದ ಪಕ್ಷದ ಕೊನೆದಿನಗಳಿಗೆ ನಾಂದಿಯಾಗಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News