ಬಿಜೆಪಿಯ ಕುದುರೆ ವ್ಯಾಪಾರ ಖಂಡಿಸಿ ಪ್ರತಿಭಟನೆ
ಬೆಂಗಳೂರು, ಜು. 31: ಗುಜರಾತಿನ ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿರುವ ಬಿಜೆಪಿಯ ನಡೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೋಮವಾರ ನಗರದ ವೌರ್ಯ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯ ವೇಷದಾರಿಗಳಿಂದ ಕುದುರೆ ವ್ಯಾಪಾರದ ಅಣಕು ಪ್ರದರ್ಶಿಸುವ ಮೂಲಕ ಬಿಜೆಪಿಯ ಧೋರಣೆಯನ್ನು ಖಂಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, ಆ.8ರಂದು ಗುಜರಾತಿನಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ. ಕಾಂಗ್ರೆಸ್‌ನ ಶಾಸಕರಿಗೆ 15 ಕೋಟಿ ರೂ.ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಆಮಿಷದ ಮೂಲಕ ಪ್ರತಿಪಕ್ಷಗಳನ್ನು ಮಟ್ಟ್ಟಹಾಕಲು ಬಿಜೆಪಿ ಮುಂದಾಗಿದೆ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಮುಂದಿಟ್ಟುಕೊಂಡು ಅಲ್ಲಿನ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಪಕ್ಷಕ್ಕೆ ಸೇರುವುಂತೆ ಹೆದರಿಸಲಾಗುತ್ತಿದೆ. ಬಿಜೆಪಿಯ ಆಮಿಷ, ಬೆದರಿಕೆಗೆ ಹೆದರಿ ಗುಜರಾತಿನ ಕಾಂಗ್ರೆಸ್ ಶಾಸಕರು ಬೆಂಗಳೂರು ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಗುಜರಾತಿನಲ್ಲಿ ಪ್ರಜಾಪ್ರಭುತ್ವ ಮರೀಚಿಕೆಯಾಗಿದೆ. ಗುಜರಾತಿನ ರಾಜಕೀಯ ಭಯೋತ್ಪಾದನೆಯನ್ನು ದೇಶ ವ್ಯಾಪಿ ವಿಸ್ತರಿಸಲು ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ವಿ.ಶೇಖರ್ ಸೇರಿದಂತೆ ಇತರರು ಇದ್ದರು.