ಮಾಜಿ ಸೈನಿಕರ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಲು ಸೂಚನೆ
ಹಾಸನ, ಆಗಸ್ಟ್ 1: ಮಾಜಿ ಸೈನಿಕರು ಮತ್ತು ಅವರ ಕುಟುಂಬದವರಿಗೆ ಸರ್ಕಾರದಿಂದ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲ ಜಿಲ್ಲಾ ಸೈನಿಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾಜಿ ಸೈನಿಕರ ಶ್ರೇಯೋಭಿವೃದ್ದಿಗೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಹಾಗೂ ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾ ಸೈನಿಕ ಮಂಡಳಿಯ ಕಾರ್ಯದರ್ಶಿಯಾಗಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಕಾಳಜಿ ವಹಿಸಬೇಕು ಎಂದರು.
ಸಭೆಯಲ್ಲಿ ಮಾಜಿ ಸೈನಿಕರು ಹಾಗೂ ನಾಮ ನಿರ್ದೇಶಿತ ಸದಸ್ಯರು ಹಾಗೂ ಸೈನಿಕರ ಸಂಘದ ಪದಾಧಿಕಾರಿಗಳು ಸಲ್ಲಿಸಿರುವ ಲಿಖಿತ ಮನವಿಗಳ ಕುರಿತು ಚರ್ಚಿಸಲಾಯಿತು. ಮಾಜಿ ಸುಬೇದಾರ್ ಮೇಜರ್ ಆರ್.ಎಲ್. ಕೃಷ್ಣ ಅವರು ವಾಹನ ಸುಂಕ ವಸೂಲಾತಿ ಕೇಂದ್ರದಲ್ಲಿ ಮಾಜಿ ಸೈನಿಕರಿಗೆ ಸುಂಕರಹಿತ ಪ್ರಯಾಣಿಸಲು ಅನುಮತಿ ನೀಡಬೇಕೆಂದು ಸಲ್ಲಿಸಿದ್ದ ಮನವಿ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಯುದ್ದ ಸಂತ್ರಸ್ಥರಿಗೆ ಉಚಿತ ನಿವೇಶನ ನೀಡುವ ಕುರಿತು ನಗರದ ಅಭಿವೃದ್ದಿ ಪ್ರಾಧಿಕಾರದೊಂದಿಗೆ ಸಮಾಲೋಚನೆ ನಡೆಸುವಂತೆ ಅವರು ಸೈನಿಕ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಪಟ್ಟಣ ಪ್ರದೇಶಗಳಲ್ಲಿರುವ ಶೇ.50 ರಷ್ಟು ಮನೆ ತೆರಿಗೆ ವಿನಾಯಿತಿಯನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕು ಎಂಬ ಸುಬೇದಾರ್ ಮೇಜರ್ ಕೋರಿಕೆ ಕುರಿತಂತೆ ಸರ್ಕಾರ ಮಟ್ಟದಲ್ಲಿ ನಿರ್ಧಾರ ಮಾಡಬೇಕಿರುವ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಮಾಜಿ ಸೈನಿಕರು ಹಾಗೂ ಅವರ ಅವಲಂಭಿತರ ಆರೋಗ್ಯ ಸಮಸ್ಯೆ ಕುರಿತು ಆಸಕ್ತಿ ವಹಿಸುವ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳ ಮಾಡಿಕೊಳ್ಳಲಾಗುವುದು .ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಕರ್ಯವಿದ್ದು, ಅದನ್ನು ಇನ್ನೂ ಉತ್ತಮ ಪಡಿಸಬಹುದಾಗಿದೆ. ಎಲ್ಲರೂ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದರೆ ಅದನ್ನು ಬಲಪಡಿಸಿದಂತಾಗುತ್ತದೆ ಎಂದ ಜಿಲ್ಲಾಧಿಕಾರಿಯವರು ಚಿಕಿತ್ಸಾ ಸೌಲಭ್ಯ ಮತ್ತು ಗುಣಮಟ್ಟವನ್ನು ಮತ್ತಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಹಾಸನಾಂಬ ವೈದ್ಯಕೀಯ ಸಂಸ್ಥೆ ಮತ್ತು ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಹಾಸನದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಕೇಳಿರುವ ದಾಖಲಾತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಅನುವು ಸೂಚಿಸಿದರು.
ಇದೇ ವೇಳೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಎನ್.ಸಿ.ಸಿ ತರಬೇತಿ ಸಂಸ್ಥೆಯ ಸ್ಥಾಪನೆ, ಸಂಚಾರಿ ಕ್ಯಾಂಟೀನ್ ಸೇವೆ ಒದಗಿಸುವ ಕುರಿತಂತೆ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.