×
Ad

ಚುನಾವಣಾ ಪ್ರಣಾಳಿಕೆಯ ಶೇ.95 ಭರವಸೆ ಈಡೇರಿಕೆ: ವಿಷ್ಣುನಂದನ್

Update: 2017-08-01 22:18 IST

ಬೈಂದೂರು, ಆ.1: ರಾಜ್ಯ ಕಾಂಗ್ರೆಸ್ ಸರಕಾರ ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ಯೋಜನೆಗಳ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಶೇ.95 ರಷ್ಟು ಭರವಸೆಗಳನ್ನು ಈಡೇರಿಸಿದೆ ಎಂದು ಎಐಸಿಸಿ ವೀಕ್ಷಕ ಪಿ.ಸಿ.ವಿಷ್ಣು ನಂದನ್ ಹೇಳಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದಪ್ರದಾನ ಸಮಾರಂಭವನ್ನು ಮಂಗಳವಾರ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತ ವಿದೇಶ ಪ್ರವಾಸ ಮಾಡುತ್ತ ಕಾಲಹರಣ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರ ಸುಳ್ಳು ಹೇಳಿ ಜನರಲ್ಲಿ ಧ್ವೇಷ ಭಾವನೆ ಹುಟ್ಟು ಹಾಕುತ್ತಿದೆ ಎಂದು ಅವರು ಟೀಕಿಸಿದರು.

ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ ಮಧ್ವರಾಜ್ ಮಾತನಾಡಿ, ಹಿಂದಿನ ಯುಪಿಎ ಸರಕಾರವು 77 ಸಾವಿರ ಕೋಟಿ ರೂ. ರೈತಸಾಲವನ್ನು ಮನ್ನಾ ಮಾಡಿದ್ದು, ರಾಜ್ಯ ಸರಕಾರ ಸಹಕಾರಿ ಬ್ಯಾಂಕುಗಳಲ್ಲಿನ 50 ಸಾವಿರ ರೂ. ಸಾಲಮನ್ನಾ ಮಾಡಿದೆ. ಆದರೆ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ನಿವೇಶನ ರಹಿತರು ಹಾಗೂ ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದವರಿಗೆ ನಿವೇಶನ ಮಂಜೂರಾಗಲಿದ್ದು, ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದರು. ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡುರಾವ್ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಆರ್. ಸಭಾಪತಿ, ಕಾರ್ಯದರ್ಶಿಗಳಾದ ವೆರೋನಿಕಾ ಕರ್ನೇಲಿಯೊ, ಎಂ.ಎಸ್.ಮಹಮದ್, ಮುಖಂಡರಾದ ಮಂಜುನಾಥ ಭಂಡಾರಿ, ಮುರಳಿ ಶೆಟ್ಟಿ ಇಂದ್ರಾಳಿ, ಸರಳಾ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಶಾಸಕ ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂಡ್ಸೆ ಬ್ಲಾಕ್ ಅಧ್ಯಕ್ಷ ಸಂಜೀವ ಶೆಟ್ಟಿ ಸ್ವಾಗತಿಸಿದರು. ಬೈಂದೂರು ಬ್ಲಾಕ್ ಅಧ್ಯಕ್ಷ ಎಸ್.ಮದನ್ ಕುಮಾರ್ ವಂದಿಸಿದರು. ಈಶ್ವರ ದೇವಾಡಿಗ ಕಾರ್ಯ ಕ್ರಮ ನಿರೂಪಿಸಿದರು.

ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಗೆ ತಕ್ಕ ಪಾಠ
ಬಿಜೆಪಿ ಪಕ್ಷ ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆಗಳನ್ನು ಸೃಷ್ಟಿಸಿ ಶವದ ಮೇಲೆ ರಾಜಕಾರಣ ಮಾಡುತ್ತಿವೆ. ಜನರನ್ನು ಮನಸ್ಸನ್ನು ಒಡೆದು, ಯುವಕರಲ್ಲಿ ಧರ್ಮದ ವಿಷ ಬೀಜವನ್ನು ಬಿತ್ತಿ ತಪ್ಪುದಾರಿಗೆ ಎಳೆಯುತ್ತಿದೆ. ಪ್ರಜಾಪ್ರಭುತ್ವ ವಿರೋಧಿಯಾಗಿರುವ ಬಿಜೆಪಿಗೆ ಜನ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡುರಾವ್ ಹೇಳಿದರು.

ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಸುಳ್ಳು ಆರೋಪಗಳ ಮೂಲಕ ಕಳಂಕ ತರಲು ಕೆಲಸ ವನ್ನು ಬಿಜೆಪಿ ಹಾಗೂ ಸಂಘಪರಿವಾರ ಮಾಡುತ್ತಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಷಾ ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯದ ಜನ ಎಚ್ಚರ ವಹಿಸಬೇಕಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News