'ಸಾವಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ'
Update: 2017-08-01 22:40 IST
ಉಡುಪಿ, ಆ.1: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿ ಕಾವ್ಯಾಳ ಸಾವಿನ ಪ್ರಕರಣ ನಿಜಕ್ಕೂ ದುರದೃಷ್ಟಕರ. ಆ ಹೆಣ್ಣು ಮಗುವಿನ ಸಾವಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಈ ಬಗ್ಗೆ ನೀಡಿದ ಹೇಳಿಕೆಯನ್ನು ತಿರುಚುವುದು ಸರಿಯಲ್ಲ. ಈ ಹೇಳಿಕೆಯನ್ನು ಸರಿಯಾಗಿ ಅರ್ಥಮಾಡಿ ಕೊಳ್ಳುವಂತೆ ಜೆಡಿಎಸ್ ಜಿಲ್ಲಾ ವಕ್ತಾರ ಪ್ರದೀಪ್ ಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕುಮಾರಸ್ವಾಮಿ ನೀಡಿದ ಹೇಳಿಕೆ ಈಗಾಗಲೇ ಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬಂದಿದೆ. ಕಾಂಗ್ರೆಸ್‌ನ ಯುವ ನಾಯಕರು ಅದನ್ನು ಮತ್ತೊಮ್ಮೆ ನೋಡಿ ಸರಿಯಾಗಿ ಅರ್ಥಮಾಡಿಕೊಳ್ಳಬೇಕಾಗಿದೆ. ಕಾವ್ಯಾಳ ಸಾವಿನ ರಹಸ್ಯವನ್ನು ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲು ಮಾಡಬೇಕು ಎಂಬುದಾಗಿ ಕುಮಾರಸ್ವಾಮಿ ಸ್ವಷ್ಟವಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.