×
Ad

ಕಾರಣಕರ್ತರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Update: 2017-08-02 18:54 IST

ಚಿಕ್ಕಮಗಳೂರು,ಆ.2: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಗ್ರಾಹಕರ ಮೇಲೆ ಹಿಂದಿ ಹೇರುತ್ತಿರುವ ಅಧಿಕಾರಿಗಳ ವಜಾ ಜೊತೆಗೆ ಮೂಡಬಿದರೆಯ ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿನಿ ಕಾವ್ಯ ಸಾವಿಗೆ ಕಾರಣರಾದವರನ್ನು ಬಂಧಿಸಲುಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

 ತಾಲ್ಲೂಕು ಕಛೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಆಂಗ್ಲ ಮತ್ತು ಹಿಂದಿ ಭಾಷೆಯ ವಿವಿಧ ಬ್ಯಾಂಕ್‌ಗಳ ಚಲನ್‌ಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗಧೀಶ್ಮಾತನಾಡಿ, ರಾಜ್ಯದಲ್ಲಿ ಕನ್ನಡ ಭಾಷೆ ಕಡ್ಡಾಯ ಎಂಬ ಆದೇಶವಿದ್ದರೂ ಅದನ್ನು ಗಾಳಿಗೆ ತೂರಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಹೇರಲಾಗುತ್ತಿದೆ. ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಬಾರದ ಅನ್ಯ ರಾಜ್ಯಗಳ ಅಧಿಕಾರಿಗಳು ಕನ್ನಡಿಗರನ್ನು ತುಚ್ಚವಾಗಿ ಕಾಣುತ್ತಿದ್ದಾರೆ ಎಂದು ಆರೋಪಿಸಿದರು.

ಬಹಳಷ್ಟು ಬ್ಯಾಂಕ್ ಅಧಿಕಾರಿಗಳಿಗೆ ಕನ್ನಡ ಬಾರದೇ ಇರುವುದರಿಂದ ಗ್ರಾಮೀಣ ಪ್ರದೇಶಗಳ ಗ್ರಾಹಕರು ವ್ಯವಹಾರನಡೆಸಲಾಗದೇ ಪರದಾಡುತ್ತಿದ್ದಾರೆ. ಹಿಂದಿ ಹೇರಿಕೆಯಿಂದಾಗಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ದೂರಿದ ಅವರು, ಈ ಹಿನ್ನೆಲೆಯಲ್ಲಿ ಹಿಂದಿ ಹೇರಿಕೆ ಮಾಡುತ್ತಿರುವ ಬ್ಯಾಂಕ್ ಅಧಿಕಾರಿಗಳನ್ನು ನಾಡದ್ರೋಹಿ ಎಂದು ಪರಿಗಣಿಸಿ ವಜಾ ಮಾಡುವಜೊತೆಗೆ ಕನ್ನಡಿಗರನ್ನು ಅಥವಾ ಕನ್ನಡದಲ್ಲಿ ಮಾತನಾಡುವವರನ್ನು ಆ ಸ್ಥಾನಗಳಿಗೆ ತುಂಬಬೇಕು ಎಂದು ಆಗ್ರಹಿಸಿದರು.

ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಿಗೂಢವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಕಾವ್ಯಳ ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಉಳಿದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಅಧ್ಯಕ್ಷ ಮನೋಜ್‌ಶೆಟ್ಟಿ ಮಾತನಾಡಿ, ಇಂದಿನ ಪ್ರತಿಭಟನೆ ಸಾಂಕೇತಿಕವಾಗಿದ್ದು, ಹಿಂದಿ ಹೇರಿಕೆ ಮುಂದುವರೆದಲ್ಲಿ ಬ್ಯಾಂಕ್‌ಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ಕಾರ್ಯದರ್ಶಿ ಕೃಷ್ಣಪ್ಪ ತರೀಕೆರೆ, ವಕ್ತಾರ ಕೋಟೆ ಸೋಮಣ್ಣ, ತಾಲ್ಲೂಕು ಉಪಾಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ನಾಗಲತಾ, ಇರ್ಷಾದ್ ಅಹಮದ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಭರತ್‌ರಾಜ್ ಅರಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News