ಸಂಘ ಪರಿವಾರದ ಮುಖಂಡರ ವಿರುದ್ಧದ ಎಫ್‌ಐಆರ್ ತಡೆಗೆ ಮತ್ತೆ ನಿರಾಕರಿಸಿದ ಹೈಕೋರ್ಟ್
ಬೆಂಗಳೂರು, ಜು.2: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆಯಲ್ಲಿ ಹತ್ಯೆಯಾದ ಶರತ್‌ಕುಮಾರ್ ಮೃತದೇಹದ ಮೆರವಣಿಗೆ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಸಂಬಂಧ ಸಂಘ ಪರಿವಾರದ ಸಂಘಟನೆಗಳ ಐವರು ಮುಖಂಡರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಲು ಹೈಕೋರ್ಟ್ ಮತ್ತೆ ನಿರಾಕರಿಸಿದೆ.
ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಪಡಿಸುವಂತೆ ಕೋರಿ ಸತ್ಯಜಿತ್ ಸುರತ್ಕಲ್, ಹಿಂದೂ ಜಾಗರಣಾ ವೇದಿಕೆಯ ಹರೀಶ್ ಪೂಂಜಾ, ಹಿಂದೂ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುರಳಿ ಕೃಷ್ಣ ಹಸಂತಡ್ಕ, ದಕ್ಷಿಣ ಕನ್ನಡ ಜಿಲ್ಲಾ ಭಜರಂಗದಳದ ಅಧ್ಯಕ್ಷ ಶರಣ್ ಪಂಪ್‌ವೆಲ್, ಗೋರಕ್ಷಕ್ ಪ್ರಮುಖ ಸಂಘದ ಪ್ರದೀಪ್ ಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರವಿಂದ ಕುಮಾರ್ ಅವರಿದ್ದ ಪೀಠ, ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಇದೇ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಿ ಅಭಿಯೋಜಕರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲರು ವಾದಿಸಿ, ರಾಜಕೀಯ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದ್ದು, ಅವರು ಯಾವುದೇ ಕೋಮು ಗಲಭೆಗೆ ಪ್ರಚೋದನೆ ನೀಡಿಲ್ಲ. ಕೇವಲ ಒಂದು ಕೋಮಿಗೆ ಸೇರಿದ ಸಂಘಟನೆಗಳ ಮುಖಂಡರನ್ನು ಗುರಿಯಾಗಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥಪಡಿಸುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸರಕಾರಿ ಅಭಿಯೋಜಕ ಸಂದೇಶ್ ಚೌಟ, ನಿಷೇಧಾಜ್ಞೆಯ ವೇಳೆ ಅರ್ಜಿದಾರರು 2 ಸಾವಿರಕ್ಕೂ ಅಧಿಕ ಜನರನ್ನು ಅಕ್ರಮವಾಗಿ ಸೇರಿಸಿ ಗಲಭೆ ಎಬ್ಬಿಸಿದ್ದಾರೆ. ಬಂಟ್ವಾಳದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಲು ಅರ್ಜಿದಾರರೇ ಮುಖ್ಯ ಕಾರಣರಾಗಿದ್ದಾರೆ. ಘಟನೆಯ ಸಂದರ್ಭದಲ್ಲಿ ಚಿತ್ರೀಕರಿಸಿದ್ದ ವಿಡಿಯೋಗಳಲ್ಲಿ ಆರೋಪಿಗಳನ್ನು ಗುರುತಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಸಂಬಂಧ ಅನ್ಯ ಕೋಮಿಗೆ ಸೇರಿರುವ ವ್ಯಕ್ತಿಗಳನ್ನೂ ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಹಂತದಲ್ಲಿ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದರೆ ತನಿಖೆಗೆ ಅಡ್ಡಿಯಾಗುವುದಲ್ಲದೆ, ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿದಾರರ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿತು. ಜೊತೆಗೆ ಅರ್ಜಿಯ ಸಂಬಂಧ ಮೊದಲು ಸರಕಾರ ಆಕ್ಷೇಪಣೆ ಸಲ್ಲಿಸಲಿ, ತದನಂತರ ಮಧ್ಯಂತರ ಮನವಿಯ ಕುರಿತು ವಿಚಾರಣೆ ನಡೆಸೋಣವೆಂದು ತಿಳಿಸಿ, ವಿಚಾರಣೆ ಮುಂದೂಡಿತು.