ಗುಜರಾತ್ ಶಾಸಕರು ಎಲ್ಲಿಗೂ ಹೋಗಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಆ.3: ಗುಜರಾತ್ ಶಾಸಕರು ಇಲ್ಲಿ ಸಂತೋಷದಿಂದ್ದಾರೆ. ಅವರು ಎಲ್ಲಿಗೂ ಹೋಗುವುದಿಲ್ಲ. ಮಾಧ್ಯಮಗಳಲ್ಲಿ ಈ ಸಂಬಂಧ ಬಂದಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬಿಡದಿ ಬಳಿಯಿರುವ ಈಗಲ್ಟನ್ ರೆಸಾರ್ಟ್‌ನಲ್ಲಿ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ತಿಳಿವಳಿಕೆ ಶಿಬಿರವನ್ನು ಆಯೋಜಿಸಲಾಗಿದೆ. ನಾಳೆ ನಮ್ಮ ರಾಜ್ಯ ಸರಕಾರದ ಸಾಧನೆಗಳನ್ನು ತಿಳಿಸುವ ಕಾರ್ಯಕ್ರಮವಿದೆ ಎಂದರು.
ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಶಾಸಕರಿಗೆ ವಿವರಣೆ ನೀಡುವುದರಿಂದ ಅವರಿಗೆ ಚುನಾವಣೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.
ಶಾಸಕ ಜ್ಯೋತಿಬಾ ಪಟೇಲ್‌ಗೆ ಜ್ವರ ಬಂದಿತ್ತು. ಹೀಗಾಗಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಖಚಿತ. ಶಾಸಕರು ಪ್ರವಾಸ ಕೈಗೊಳ್ಳಲು ಬಯಸಿದರೆ, ನಾವು ಕರೆದುಕೊಂಡು ಹೋಗುತ್ತೇವೆ ಎಂದು ಅವರು ಹೇಳಿದರು.
ಶಾಸಕರನ್ನು ಡಿ.ಕೆ.ಶಿವಕುಮಾರ್ ನೋಡಿಕೊಳ್ಳುತ್ತಿದ್ದರು. ಅವರ ಜೊತೆಗೆ ನಾವು ಈ ವಿಚಾರದಲ್ಲಿ ಜವಾಬ್ದಾರಿ ತೆಗೆದುಕೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಉಪಸ್ಥಿತರಿದ್ದರು.