ಡಿಕೆಶಿ ವಿರುದ್ಧ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ
ಮಡಿಕೇರಿ, ಆ.4: ವಾಮಮಾರ್ಗದ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಯತ್ನಿಸುತ್ತಿರುವ ಬಿಜೆಪಿ ತನ್ನೆಲ್ಲಾ ಷಡ್ಯಂತ್ರಗಳು ಫಲಿಸದೇ ಇದ್ದ ಕಾರಣದಿಂದ ಕೇಂದ್ರ ಸರಕಾರದ ಮೂಲಕ ಐಟಿ ದಾಳಿಯಂತಹ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೆ.ಎ.ಯಾಕೂಬ್ ಆರೋಪಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಹಾಗೂ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಮೇಲೆ ನಡೆದಿರುವ ಐಟಿ ದಾಳಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಹೀನ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ಜನಪ್ರಿಯತೆಯನ್ನು ಸಹಿಸಲಾಗದ ಬಿಜೆಪಿ ಕೋಮು ಗಲಭೆ ಸೇರಿದಂತೆ ಇನ್ನಿತರ ಚಟುವಟಿಕೆಗಳ ಮೂಲಕ ಅರಾಜಕತೆಯನ್ನು ಸೃಷ್ಟಿಸುತ್ತಿದೆ. ಈ ಪ್ರಯತ್ನಗಳಿಗೆ ಜನ ಸೊಪ್ಪು ಹಾಕಲಿಲ್ಲವೆಂದು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಖಚಿತವೆಂದು ಮುನ್ಸೂಚನೆ ದೊರೆತ್ತಿರುವ ಬಿಜೆಪಿ ಮಂದಿ ಕೇಂದ್ರ ಸರಕಾರದ ಮೂಲಕ ಸಚಿವ ಶಿವಕುಮಾರ್ ವಿರುದ್ಧ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಗಳೇ ಪ್ರಭುಗಳಾಗಬೇಕಾಗಿತ್ತು. ಆದರೆ ಬಿಜೆಪಿ ತನ್ನ ಸರ್ವಾಧಿಕಾರಿ ಧೋರಣೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಹತ್ತಿಕಲು ಯತ್ನಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಕೀಳು ಮಟ್ಟದ ರಾಜಕಾರಣಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆ.ಎ.ಯಾಕೂಬ್ ಭವಿಷ್ಯ ನುಡಿದಿದ್ದಾರೆ.
ಕೇವಲ ಕಾಂಗ್ರೆಸ್ ನಾಯಕರುಗಳನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಯುತ್ತಿದ್ದು, ಬಿಜೆಪಿಯ ಅನೇಕ ಮುಖಂಡರು ಹೊಂದಿರಬಹುದಾದ ಬೇನಾಮಿ ಆಸ್ತಿಗಳ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲವೆಂದು ಅವರು ಪ್ರಶ್ನಿಸಿದ್ದಾರೆ. ದೇಶದಲ್ಲಿರುವ ಯಾರೇ ತೆರಿಗೆ ವಂಚನೆ ಮಾಡಿದರೂ ಸಮಾನ ದಾಳಿ ಮತ್ತು ತನಿಖೆ ನಡೆಯಬೇಕಾಗುತ್ತದೆ. ಆದರೆ ಕೇವಲ ಕಾಂಗ್ರೆಸ್ ನಾಯಕರ ಮೇಲೆ ನಡೆಯುತ್ತಿರುವ ಕಾರ್ಯಾಚರಣೆಯನ್ನು ಗಮನಿಸಿದರೆ ಇದೊಂದು ದ್ವೇಷದ ರಾಜಕಾರಣಕ್ಕಾಗಿ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ಸಾಬೀತಾಗುತ್ತದೆ. ಅಲ್ಲದೆ ಬಿಜೆಪಿಯ ಕುತಂತ್ರ ರಾಜಕಾರಣದ ಬಗ್ಗೆ ಜನರು ಕೂಡ ಗಮನಿಸುತ್ತಿದ್ದಾರೆ. ಕೇಂದ್ರ ಸರಕಾರದ ಈ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತ್ತಿದೆ ಎಂದು ಯಾಕೂಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.