×
Ad

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ

Update: 2017-08-04 17:05 IST

ಮಡಿಕೇರಿ, ಆ.4: ಕೊಡಗು ಗೌಡ ವಿದ್ಯಾ ಸಂಘದಿಂದ ವರ್ಷಂ ಪ್ರತಿಯಂತೆ ಪ್ರಸಕ್ತ ಸಾಲಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮಕ್ಕೆ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯ ಬಾಂಧವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.85 ಕ್ಕೂ ಹೆಚ್ಚಿನ ಅಂಕ ಪಡೆದ ಗ್ರಾಮೀಣ ವಿದ್ಯಾರ್ಥಿಗಳು ಮತ್ತು ಶೇ.90 ಕ್ಕೂ ಹೆಚ್ಚಿನ ಅಂಕಗಳಿಸಿದ ನಗರ ಪ್ರದೇಶದ ವಿದ್ಯಾರ್ಥಿಗಳನ್ನು, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು , ಸಿಇಟಿ ಮತ್ತು ಎನ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾವಿರದ ಒಳಗೆ ರ್ಯಾಂಕ್ ಪಡೆದ ಗೌಡ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ವೇತನವನ್ನು ನೀಡಲು ಉದ್ದೇಶಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 20 ರ ಒಳಗಾಗಿ ಅಂಕಪಟ್ಟಿಯ ಜೆೆರಾಕ್ಸ್ ಪ್ರತಿಯೊಡನೆ ಸಂಘದ ಕಛೇರಿಗೆ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು.

ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ವಿಭಾಗದಲ್ಲಿ ರ್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಸಂಘ ಉದ್ದೇಶಿಸಿದೆ. ಆಸಕ್ತರು ಸೆಪ್ಟೆಂಬರ್20 ರ ಒಳಗಾಗಿ ಸಂಘದ ಕಛೇರಿಗೆ ಅರ್ಜಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದರು.

ವಿವಿಧ ಸ್ಪರ್ಧೆಗಳು
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗೌಡ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಗಸ್ಟ್ 27 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಎಲ್‌ಕೆಜಿಯಿಂದ 1ನೇ ತರಗತಿಯವರೆಗಿನ ಮಕ್ಕಳಿಗೆ ಛದ್ಮವೇಷ, 2ನೇ ತರಗತಿಯಿಂದ 4ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ, 5ನೇ ತರಗತಿಯಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಏಕಪಾತ್ರಾಭಿನಯ, 8ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೂಕ್ಷ್ಮ ಪರಿಸರ ತಾಣದಿಂದ ಕೊಡಗಿನ ಮೇಲಾಗುವ ಪರಿಣಾಮಗಳು ವಿಷಯದಡಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಸ್ಪರ್ಧಾ ದಿನಾಂಕದಂದು ಬೆಳಗ್ಗೆ 9 ಗಂಟೆಯ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ತಿಳಿಸಿದರು.

ವಸತಿ ಸೌಲಭ್ಯ
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ನಡೆಯುತ್ತಿರುವ ವಿದ್ಯಾರ್ಥಿನಿಲಯದಲ್ಲಿ ವಸತಿ ಸೌಲಭ್ಯವಿದ್ದು, ಜಿಲ್ಲೆಯ ಗೌಡ ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಇದೇ ಸಂದರ್ಭ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ವಿದ್ಯಾಸಂಘದ ಉಪಾಧ್ಯಕ್ಷರಾದ ಅಂಬೆಕಲ್ಲು ನವೀನ್ ಕುಶಾಲಪ್ಪ, ಸಹ ಕಾರ್ಯದರ್ಶಿ ತಳೂರು ಕೆ. ದಿನೇಶ್ ಕುಮಾರ್ ಹಾಗೂ ಖಜಾಂಚಿ ಕಟ್ಟೆಮನೆ ಆರ್. ಸೋನಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News