×
Ad

ಐಟಿ ದಾಳಿಗೆ ಕೇಂದ್ರದ ಕುಮ್ಮಕ್ಕು ಖಂಡಿಸಿ ಪ್ರತಿಭಟನೆ

Update: 2017-08-04 17:47 IST

ಬೆಂಗಳೂರು, ಆ. 4: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿಯ ಹಿಂದೆ ಕೇಂದ್ರ ಸರಕಾರದ ಕುಮ್ಮಕ್ಕು ಇದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಕಾರ್ಯಕರ್ತರು ಪ್ರತಿಭಟಿಸಿದರು.

ಶುಕ್ರವಾರ ನಗರದ ಆನಂದರಾವ್ ವೃತ್ತದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ್, ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಎದುರಿಸಲಾಗದೆ, ಆದಾಯ ತೆರಿಗೆ ಇಲಾಖೆ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ನಡೆಸಿರುವ ಐಟಿ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.

ಕಳೆದ ಉಪ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಬಿಜೆಪಿ ಹತಾಷಗೊಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ಕುಮ್ಮಕ್ಕು ನಡೆಸಿದ್ದು, ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿಯನ್ನು ನಡೆಸುವ ಮೂಲಕ ಕಾಂಗ್ರೆಸ್ ವರ್ಚಸ್ಸನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದರು.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ ನಾಯಕರು ಹೇಗಾದರೂ ಮಾಡಿ ಕಾಂಗ್ರೆಸ್ ವರ್ಚಸ್ಸಿಗೆ ಮಸಿ ಬಳಿದು ಚುನಾವಣೆಯಲ್ಲಿ ಸೋಲು ಅನುಭವಿಸಲು ಈ ತಂತ್ರ ಅನುಸರಿಸಿದೆ ಎಂದು ಅವರು ದೂರಿದರು.

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯವನ್ನು ಕೇಂದ್ರ ಸರಕಾರವು ತನ್ನ ಕೈಗೊಂಬೆಯಂತೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರನ್ನೆ ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಇದಕ್ಕೆ ಜನರೇ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News