ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ನಿರ್ಧಾರ
ಬೆಂಗಳೂರು, ಆ. 4: ರಾಜ್ಯದಲ್ಲಿ ತೀವ್ರ ಸ್ವರೂಪದ ಮಳೆ ಕೊರತೆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿಯೂ ಬರ ಪರಿಸ್ಥಿತಿ ಸೃಷ್ಟಿಯಾಗಿರುವುದರಿಂದ ತುರ್ತು ನೆರವು ನೀಡುವಂತೆ ಕೋರಿ ಕೇಂದ್ರಕ್ಕೆ ಶೀಘ್ರದಲ್ಲೆ ಮನವಿ ಸಲ್ಲಿಸಲು ಸಚಿವ ಸಂಪುಟ ಉಪ ಸಮಿತಿ ನಿರ್ಧರಿಸಿದೆ.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾನೂನು ಸಚಿವ ಜಯಚಂದ್ರ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತಿಯಲ್ಲಿ ಸಭೆ ನಡೆಸಿ ಕೇಂದ್ರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಮಳೆಗಾಲದಲ್ಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ಒಳನಾಡಿನಲ್ಲಿ ಶೇ.38ರಷ್ಟು ಹಾಗೂ ಮಲೆನಾಡಿನಲ್ಲಿ ಶೇ.28ರಷ್ಟು ಮಳೆ ಕೊರತೆಯಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವ ಜಯಚಂದ್ರ ಹೇಳಿದ್ದಾರೆ.
ಬರ ಪೀಡಿತ ಪ್ರದೇಶಗಳ ಘೋಷಣೆ ಹಾಗೂ ಪರಿಹಾರ ವಿತರಣೆ ಸಂಬಂಧ ಕೇಂದ್ರದ ಹೊಸ ಮಾರ್ಗಸೂಚಿಯಿಂದ ರಾಜ್ಯಕ್ಕೆ ಸಮಸ್ಯೆಯಾಗಿದೆ. ಆದುದರಿಂದ ಮಾರ್ಗಸೂಚಿ ಕೂಡಲೇ ಪರಿಷ್ಕರಿಸಬೇಕು. ಅಲ್ಲದೆ, ರಾಜ್ಯಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗುವುದು ಎಂದರು.
ತೀವ್ರ ಸ್ವರೂಪದ ಅಂತರ್ಜಲ ಕೊರತೆಯಿಂದ ಅಡಿಕೆ ಹಾಗೂ ತೆಂಗು ಬೆಳೆ ಹಾನಿಗೀಡಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದುದರಿಂದ ತೆಂಗು ಮತ್ತು ಅಡಿಕೆ ಬೆಳೆ ನಷ್ಟಕ್ಕೆ ಕೇಂದ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಕೋರಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು. ಅದೇ ರೀತಿ ಅಗತ್ಯವಿರುವ ಹಳ್ಳಿ ಮತ್ತು ಪಟ್ಟಣ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲು ಸೂಚಿಸಲಾಗಿದೆ. ಅಲ್ಲದೆ, ಈ ಸಂಬಂಧ ಬಾಕಿ ಇರುವ ಹಣವನ್ನು ತಕ್ಷಣವೆ ಪಾವತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಚಿತ್ರದುರ್ಗ ಸೇರಿದಂತೆ ಕೆಲವೆಡೆ ಗೋಶಾಲೆಗಳನ್ನು ಮುಂದುವರಿಸುವ ಬೇಡಿಕೆ ಇದ್ದು, ಅಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ಮತ್ತಷ್ಟು ಕಾಲ ಗೋಶಾಲೆಗಳನ್ನು ಮುಂದುವರಿಸಲು ಸಂಪುಟ ಉಪಸಮಿತಿ ತೀರ್ಮಾನಿಸಿದೆ ಎಂದ ಅವರು, ಹೊರ ರಾಜ್ಯಗಳಿಂದ ತರಿಸುತ್ತಿರುವ ಮೇವನ್ನು ಬಳಸಲು ಹಿಂಜರಿಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಸಂಬಂಧಪಟ್ಟ ವರದಿ ನೀಡಲು ಕೃಷಿ ವಿಶ್ವ ವಿದ್ಯಾಲಯವನ್ನು ಕೋರಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರಕಾರ ಅಗತ್ಯ ಮುನ್ನಚ್ಚರಿಕೆ ಕೈಗೊಂಡಿದೆ. ಅಲ್ಲದೆ, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.