ಪರಿಶಿಷ್ಟರ ಭಡ್ತಿ ಮೀಸಲಾತಿ; ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರ ನಿರ್ಧಾರ: ಸಚಿವ ಕಾಗೋಡು ತಿಮ್ಮಪ್ಪ
ಬೆಂಗಳೂರು, ಆ.4: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಭಡ್ತಿ ಮೀಸಲಾತಿ ಸಂರಕ್ಷಣೆಗಾಗಿ ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ತನ್ನ ನೇತೃತ್ವದಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಮೇಲ್ಕಂಡ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪರಿಶಿಷ್ಟ ನೌಕರರ ಹಿಂಭಡ್ತಿ ತಪ್ಪಿಸಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ ಎಂದು ಅವರು ಮಾಹಿತಿ ನೀಡಿದರು.
ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಸಂರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ಮುಂದಿನ ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಗೋಡು ತಿಮ್ಮಪ್ಪ ಇದೇ ವೇಳೆ ಸ್ಪಷ್ಟಪಡಿಸಿದರು.
ಪರಿಶಿಷ್ಟ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಸಚಿವ ಸಂಪುಟ ಉಪ ಸಮಿತಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಲಿದೆ ಎಂದ ಅವರು, ಮುಂದೆಯೂ ಭಡ್ತಿ ಮೀಸಲಾತಿ ಕಾಯ್ದುಕೊಳ್ಳಲು ಸುಗ್ರೀವಾಜ್ಞೆ ಹೊರಡಿಸುವುದು ಎಂದು ಹೇಳಿದರು.
ಸಂವಿಧಾನದ 16ನೆ ಕಲಂ 4ರ ಅಡಿಯಲ್ಲಿ ನೇಮಕಾತಿ ಹಾಗೂ ಉದ್ಯೋಗದಲ್ಲಿ ಭಡ್ತಿ ಮೀಸಲಾತಿಯನ್ನು ಪ್ರಸ್ತಾಪಿಸಲಾಗಿದೆ. ಅದರನ್ವಯ ಹೊಸ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದ ಅವರು, ಮುಂಬರುವ ದಿನಗಳಲ್ಲಿ ಪರಿಶಿಷ್ಟರ ಹುದ್ದೆಗಳನ್ನು ಖಾಲಿ ಬಿಡದಂತೆ ನೋಡಿಕೊಳ್ಳಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.
ಆರಂಭದಲ್ಲೇ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಟಿ.ಬಿ.ಜಯಚಂದ್ರ, ಸಮಾಜ ಕಲ್ಯಾಣ ಸಚಿವ ಆಂಜನೇಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಅಪರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಮತ್ತಿತರರು ಪಾಲ್ಗೊಂಡಿದ್ದರು.