ಬಿಜೆಪಿ ಕಲ್ಲೇಟಿಗೆ ಕಾಂಗ್ರೆಸ್ ಹೆದರಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಆ.4: ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಗುಜರಾತ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ವಾಹನದ ಮೇಲೆ ನಡೆದಿರುವ ಕಲ್ಲಿನ ದಾಳಿ ಕುರಿತು ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ.
ಶುಕ್ರವಾರ ನಗರದ ಆನಂದ್‌ರಾವ್ ವೃತ್ತದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ ಒದಗಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಕಲ್ಲೇಟಿಗೆ ಕಾಂಗ್ರೆಸ್ ಪಕ್ಷ ಹೆದರುವುದಿಲ್ಲ ಎಂದರು.
ರಾಹುಲ್ ಗಾಂಧಿ ದೇಶದ ಭವಿಷ್ಯದ ನಾಯಕ. ಅವರ ವಾಹನದ ಮೇಲೆ ನಡೆದಿರುವ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಹುಲ್‌ಗಾಂಧಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ದೇಶಾದ್ಯಂತ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಅವರು ಹೇಳಿದರು.
ಬಿಜೆಪಿಯವರು ಕ್ಷಮೆಯಾಚಿಸದಿದ್ದರೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ನಾಯಕರು ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಆದುದರಿಂದ, ಶಾಸಕರಿಗೆ ನಮ್ಮ ರಾಜ್ಯದಲ್ಲಿ ರಕ್ಷಣೆ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ರಾಹುಲ್‌ಗಾಂಧಿ ಹಾಗೂ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರು ಈ ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಹುಲ್‌ಗಾಂಧಿ ಅಂಗರಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆಯ ದಾಳಿಯು ರಾಜಕೀಯ ಷಡ್ಯಂತ್ರವಾಗಿದೆ. ಈ ಕುರಿತು ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.