×
Ad

ಕಾರ್ಯಕಾರಿಣಿಯಿಂದ ದೂರ ಉಳಿದ ಕೆ.ಎಸ್.ಈಶ್ವರಪ್ಪ

Update: 2017-08-06 17:27 IST

ಬೆಂಗಳೂರು, ಆ. 6: ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿಗೆ ಗೈರುಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಶನಿವಾರದಿಂದ ಆರಂಭವಾಗಿದ್ದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ನಡೆಯಬೇಕಿತ್ತು. ಆದರೆ, ಗುಜರಾತ್ ರಾಜ್ಯಸಭೆ ಚುನಾವಣೆಗೆ ಷಾ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಷಾ ಕಾರ್ಯಕಾರಣಿಗೆ ಆಗಮಿಸಲಿಲ್ಲ.

ಆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತವರ ಆಪ್ತರ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ, ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳದೆ ಶಿವಮೊಗ್ಗದಲ್ಲೆ ಇದ್ದಾರೆ. ಉಸ್ತುವಾರಿ ಮುರುಳೀಧರ್ ರಾವ್, ಬಿಎಸ್‌ವೈ ಅವರೊಂದಿಗೆ ವೇದಿಕೆ ಹಂಚಿಕೊಂಡರೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಈಶ್ವರಪ್ಪ ದೂರ ಉಳಿದಿದ್ದಾರೆ.

 ನಿನ್ನೆ ನಡೆದ ಪಕ್ಷದ ಪದಾಧಿಕಾರಿಗಳ ವಿಶೇಷ ಸಭೆಯ ವಿಸ್ತಾರಕ ವರದಿಯಲ್ಲಿ ಈಶ್ವರಪ್ಪಹಾಗೂ ಯಡಿಯೂರಪ್ಪ ನಡುವಿನ ವೈಯಕ್ತಿಕ ಭಿನ್ನಮತದಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ ಎಂದು ಹೇಳಲಾಗಿತ್ತು. ಇದೀಗ ಅದು ನಿಜ ಎಂಬುದು ಈಶ್ವರಪ್ಪ ಗೈರು ಹಾಜರಿ ಎತ್ತಿ ತೊರಿಸಿತು. ಆ ಮೂಲಕ ಬಿಜೆಪಿಯಲ್ಲಿ ಭಿನ್ನಮತ ಇನ್ನು ಶಮನವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಗೆಲುವು ನಮ್ಮದೆ:ರಾಜ್ಯದಲ್ಲಿ ಮುಂದಿನ ಸರಕಾರ ಬಿಜೆಪಿಯದ್ದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದರು.

ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ನಡೆದ ಎರಡನೆ ದಿನದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದೆ ಎಂಬ ವರದಿ ಸಿಕ್ಕಿದೆ. ಹೀಗಾಗಿ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಸೂಚಿಸಿದರು.

ರಾಷ್ಟ್ರೀಯಾಧ್ಯಕ್ಷ ಅಮಿತ್ ಷಾ ಈ ತಿಂಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ನಾಯಕರ ಅಪೇಕ್ಷೆ ಹಾಗೂ ನಿರೀಕ್ಷೆಗೆ ತಕ್ಕಂತೆ ಎಲ್ಲ ಕಾರ್ಯಕರ್ತರು ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕಿದೆ ಎಂದು ಯಡಿಯೂರಪ್ಪ ನುಡಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಲವು ಮುಖಂಡರು ಶೀಘ್ರದಲ್ಲೆ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಪಕ್ಷಕ್ಕೆ ಸೇರ್ಪಡೆಯಾಗುವವರಿಗೆಲ್ಲ ಟಿಕೆಟ್ ನೀಡುವುದಿಲ್ಲ. ಪಕ್ಷದ ಮೂಲ ಕಾರ್ಯಕರ್ತರ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಚುನಾವಣೆಗೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ‘ಲಿಂಗಾಯತ ಪ್ರತ್ಯೇಕ ಧರ್ಮ’ದ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತಿದ್ದಾರೆ. ನಾಡಧ್ವಜದ ಬಗ್ಗೆ ನಮಗೆ ಗೌರವವಿದೆ. ಆ ವಿಚಾರದಲ್ಲೂ ಒಡಕು ಮೂಡಿಸುವ ಪ್ರಯತ್ನವನ್ನು ಸಿಎಂ ನಡೆಸಿದ್ದಾರೆಂದು ಯಡಿಯೂರಪ್ಪ ಟೀಕಿಸಿದರು.

ಭ್ರಷ್ಟರಿಗೆ ರಕ್ಷಣೆ ನೀಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಜೈಲಿನ ಭ್ರಷ್ಟಾಚಾರ ಬಯಲಿಗೆಳೆದ ಪೊಲೀಸ್ ಅಧಿಕಾರಿ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಯಿತು. ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದ ಹೆಸರಿನಲ್ಲಿ ಹಣ ಲೂಟಿ ಮಾಡಲಾಗಿದೆ ಎಂದು ದೂರಿದರು.

ಉಸ್ತುವಾರಿ ಮುರಳೀಧರ್ ರಾವ್, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಸದಾನಂದಗೌಡ, ಮುಖಂಡರಾದ ರಮೇಶ್ ಜಿಗಜಿಣಗಿ, ಅಶೋಕ್, ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News