ಜವಾಬ್ದಾರಿಯರಿತು ಕಾರ್ಯನಿರ್ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ: ಜಿಲ್ಲಾಧಿಕಾರಿ
ಶಿವಮೊಗ್ಗ, ಆ. 6: ಮಳೆಗಾಲದಲ್ಲಿ ಕೀಟಜನ್ಯ ಹಾಗೂ ಸಾಂಕ್ರಾಮಿಕ ರೋಗಗಳ ಹರಡಬಹುದಾದ ಸಂಭವ ಹೆಚ್ಚಾಗಿರುವುದರಿಂದ ಈ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಲೇರಿಯಾ, ಡೆಂಗ್ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆ ನಗರದ ಆಯ್ದ ಭಾಗಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದಾಗ ಸೊಳ್ಳೆಗಳಿಂದ ರೋಗಗಳು ಹರಡಬಹುದಾದ ಸೂಚನೆ ಇದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಸಂಬಂಧ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಕೂಡಲೆ ವರದಿ ನೀಡುವಂತೆ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಸಾಂಕ್ರಾಮಿಕ ರೋಗಗಳನ್ನು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ವೈದ್ಯರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಗೊಳಿಸಲು ಕೇವಲ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸಿದರೆ ಸಾಲದು, ಸಾರ್ವಜನಿಕರೂ ಕೂಡ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ಅವರು ಕರೆ ನೀಡಿದರು.
ಈ ಸಂಬಂಧ ನಗರದ ಮಾಡ್ರನ್ ಚಿತ್ರಮಂದಿರದ ಆಯ್ದ ಪ್ರದೇಶಗಳಿಗೆ ಆರೋಗ್ಯ ಇಲಾಖೆ ಮತ್ತು ಸಂಬಂಧಿತ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುತ್ತಿರುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಚವಾಗಿಟ್ಟು ಕೊಳ್ಳುವಂತೆ ಸೂಚಿಸಿದರು.
ಟೈರ್, ತೆಂಗಿನಚಿಪ್ಪು, ಹೂಕುಂಡ, ಬಾನಿ, ಹಳೆಯ ಸಾಮಗ್ರಿ ಮುಂತಾದ ಕಡೆಗಳಲ್ಲಿ ಮಳೆಯ ನೀರು ಸಂಗ್ರಹಗೊಂಡು ಲಾರ್ವಾ, ಸೊಳ್ಳೆಗಳು ಬಹು ಸಂಖ್ಯೆಯಲ್ಲಿ ಉಲ್ಬಣಗೊಂಡು ಸಾಂಕ್ರಾಮಿಕ ರೋಗಗಳು ಹರಡಬಹುದಾದ ಸಾದ್ಯತೆಗಳಿರುವುದರಿಂದ ಮನೆಯ ವಾತಾವರಣವನ್ನು ಸ್ವಚ್ಚವಾಗಿಟ್ಟು ಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ನಗರದ ಹಲವು ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವುದಕ್ಕೆ ಕಾರಣವಾಗಿವೆ. ಇವುಗಳನ್ನು ಪಾಲಿಕೆಯ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಹಕಾರ ಪಡೆದು, ಸ್ಚಚ್ಚತೆಯ ನಂತರ ಸೊಳ್ಳೆಗಳು ಹರಡದಂತೆ ಔಷಧ ಸಿಂಪರಣೆ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣ, ಆಹಾರ ಗುಣಮಟ್ಟ ಸುರಕ್ಷತೆ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾ ಪಂ. ಉಪಕಾರ್ಯದರ್ಶಿ ಎ.ಎಸ್.ಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ಟಿ.ಬಿ.ಸತ್ಯನಾರಾಯಣ, ಜಂಟಿ ಕೃಷಿ ನಿರ್ದೇಶಕ ಡಾ.ಮಧುಸೂದನ್, ಪಶು ವೈದ್ಯ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‌ನಾಯ್ಕ, ಡಾ.ಶಂಕರಪ್ಪ, ಡಾ.ನಟರಾಜ್, ಡಾ.ಕಾಂತರಾಜ್, ಡಾ.ಆರ್.ಹನುಮಂತಪ್ಪ, ಡಾ.ಧನಂಜಯಸರ್ಜಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.