ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಎಸ್.ಆರ್.ಹಿರೇಮಠ್ ಆಗ್ರಹ

Update: 2017-08-08 13:12 GMT

ಬೆಂಗಳೂರು, ಆ.8: ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಅಕ್ರಮ ಆಸ್ತಿ ಮತ್ತು ಬೇನಾಮಿ ಆಸ್ತಿಯ ದಾಖಲೆಗಳು ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೂಡಲೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಂಘಟನೆಯ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ, ಸಂಬಂಧಿಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ವಶ ಪಡಿಸಿಕೊಂಡಿರುವ ದಾಖಲೆಗಳ ಆಧಾರದ ಮೇಲೆ ವಿಶೇಷ ತನಿಖಾ ತಂಡದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ, ಸಂಬಂಧಿಕರ ಮನೆಯ ಮೇಲೆ ಸೇರಿದಂತೆ 70 ಕ್ಕೂ ಅಧಿಕ ಕಡೆಗಳಲ್ಲಿ ಸತತ 78 ಗಂಟೆಗಳ ಕಾಲ ಏಕಕಾಲದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಖಲೆಗಳ ಆಧಾರದ ಮೇಲೆ ಜಾರಿ ನಿದೇರ್ಶನಾಲಯ ಹಾಗೂ ಸಿಬಿಐ ಜಂಟಿಯಾಗಿ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಹೇಳಿದರು.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಒಳಪಡಿಸುವಂತೆ ಇಂದು ಪ್ರಧಾನ ಮಂತ್ರಿ, ಅರ್ಥ ಸಚಿವರಿಗೆ ಪತ್ರ ಬರೆಯಲಾಗಿದೆ. ಗಣಿದಣಿ ರೆಡ್ಡಿ ಸಹೋದರರ ಅಟ್ಟಹಾಸ ಅಡಗಿಸಿದಂತೆ, ಸಚಿವ ಡಿ.ಕೆ.ಶಿವಕುಮಾರ್ ಅವರ ಭ್ರಷ್ಟಾಚಾರಕ್ಕೆ ತಾತ್ವಿಕ ಅಂತ್ಯ ಆಡಬೇಕು ಎಂದು ಆಗ್ರಹಿಸಿದರು.
ಈ ತನಿಖೆಗಳು ನಿಷ್ಪಕ್ಷಪಾತವಾಗಿ ನಡೆಯಲು ಕೂಡಲೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಡಿನೋಟಿಫೈ ಕೈಬಿಡಲು ಆಗ್ರಹ : ರಾಜ್ಯದ ಜಲ ಮೂಲಗಳಾದ ಕೆರೆ ಕುಂಟೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿರುವ ಸರಕಾರ ಕೂಡಲೆ ಕೈ ಬಿಡಬೇಕು. ಜಲ ಮೂಲಗಳನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಬೇಕು. ಕೆರೆಗಳ ಅವನತಿಗೊಳಿಸಲು ಮುಂದಾಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜನ ಸಂಗ್ರಾಮ ಪರಿಷತ್ತಿನ ಕಾರ್ಯಕರ್ತರಾದ ಐ.ಜಿ.ಪುಲ್ಲಿ, ಸಿ.ಎನ್.ದೀಪಕ್, ರಾಘವೇಂದ್ರ ಕುಷ್ಟಗಿ ಸೇರಿದಂತೆ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News