ಮಹಾದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶಿಸಲಿ: ಎನ್.ಎಚ್.ಕೋನರೆಡ್ಡಿ
ಬೆಂಗಳೂರು, ಆ.10: ಮಹಾದಾಯಿ ಜಲ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆಗ್ರಹಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಗೋವಾ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸಮಸ್ಯೆ ಇತ್ಯರ್ಥ ಪಡಿಸುವ ಮಾತುಗಳನ್ನಾಡುತ್ತಿದ್ದಾರೆ ಎಂದರು.
ಪ್ರಧಾನಮಂತ್ರಿ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂಬುದು ನಮ್ಮ ಆಶಯ. ರಾಜ್ಯದ ನೆಲ, ಜಲ ಹಾಗೂ ಭಾಷೆ ವಿಚಾರ ಬಂದಾಗ ಪಕ್ಷಾಭೇದ ಮರೆತು ಎಲ್ಲರೂ ಒಂದಾಗಿ ಹೋರಾಟ ಮಾಡಿದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಕೋನರೆಡ್ಡಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆ.14ರಂದು ಸರ್ವಪಕ್ಷಗಳ ಮುಖಂಡರು ಹಾಗೂ ಸದನ ನಾಯಕರ ಸಭೆಯನ್ನು ಕರೆದಿದ್ದಾರೆ. ಮಹಾದಾಯಿ ವಿಚಾರದ ಕುರಿತು ವಿವರವಾಗಿ ಚರ್ಚೆ ನಡೆಸಿ ಮುಂದಿನ ನಡೆ ಅನುಸರಿಸುತ್ತೇವೆ ಎಂದು ಅವರು ತಿಳಿಸಿದರು.
ಶಿಷ್ಟಾಚಾರ ಉಲ್ಲಂಘನೆ ಆರೋಪ: ಧಾರವಾಡ ಜಿಲ್ಲೆಯ ನನ್ನ ಮತಕ್ಷೇತ್ರ ನವಲಗುಂದ ನಗರದಲ್ಲಿ ನಿರ್ಮಿಸಲಾಗಿರುವ ನೂತನ ಹೈಟೆಕ್ ಮಾದರಿಯ ‘ನವಲಗುಂದ ವಕೀಲರ ಸಂಘದ ಕಟ್ಟಡ’ಕ್ಕೆ ಸರಕಾರದಿಂದ 2.67 ಕೋಟಿ ರೂ.ಅನುದಾನ ಬಿಡುಗಡೆ ಮಾಡಿ, ಲೋಕೋಪಯೋಗಿ ಇಲಾಖೆಯಿಂದ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ ಎಂದು ಕೋನರೆಡ್ಡಿ ಹೇಳಿದರು.
ಸರಕಾರದಿಂದ ಅನುದಾನ ಬಿಡುಗಡೆಯಾಗಿ ಕಟ್ಟಡ ನಿರ್ಮಿಸಿದ ನಂತರ ಉದ್ಘಾಟನೆ ಮಾಡಿ ನ್ಯಾಯಾಂಗ ಇಲಾಖೆಗೆ ಒಪ್ಪಿಸಲು ವಿಧಾನಸಭೆಯಲ್ಲಿ ನಿರ್ಣಯಿಸಲಾಗಿದೆ. ಅದರಂತೆ, ಸ್ಪೀಕರ್, ಮುಖ್ಯಮಂತ್ರಿ, ಕಾನೂನು ಸಚಿವರಿಗೆ ಇದರ ಜವಾಬ್ದಾರಿವಹಿಸಿ ಸರಕಾರದಿಂದ ಆದೇಶ ಹೊರಡಿಸಲು ತೀರ್ಮಾನಿಸಲಾಗಿತ್ತು. ಆದರೆ, ಈವರೆಗೆ ಸರಕಾರದಿಂದ ಸ್ಪಷ್ಟ ನಿರ್ದೇಶನ ಬಂದಿಲ್ಲ ಎಂದು ಅವರು ತಿಳಿಸಿದರು.
ನನ್ನ ಕ್ಷೇತ್ರದ ನೂತನ ವಕೀಲರ ಸಂಘದ ಕಟ್ಟಡ ಉದ್ಘಾಟನೆಗೆ ಸರಕಾರದ ಶಿಷ್ಟಾಚಾರದಂತೆ ಮುಖ್ಯಮಂತ್ರಿ, ಕಾನೂನು ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಸ್ಥಳೀಯ ಶಾಸಕರು ಸೇರಿದಂತೆ ಸಂಬಂಧಿಸಿದ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ನನ್ನ ಹೆಸರನ್ನು ಸಹ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದೆ ನನ್ನ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಕೋನರೆಡ್ಡಿ ಆರೋಪಿಸಿದರು.
ಈ ಸಂಬಂಧ ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಲಕರ್ಣಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಈ ರೀತಿ ಶಿಷ್ಟಾಚಾರ ಉಲ್ಲಂಘನೆ ಮಾಡದಂತೆ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಈ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನಿಯಮಗಳಂತೆ ಜನಪ್ರತಿನಿಧಿಗಳ ಹೆಸರುಗಳನ್ನು ಸೇರಿಸಿ ಆ.12ರಂದು ಕಾರ್ಯಕ್ರಮ ನಡೆಸಲು ತಕ್ಷಣ ನಿರ್ದೇಶನ ನೀಡಬೇಕು ಎಂದು ಕೋನರೆಡ್ಡಿ ಮನವಿ ಮಾಡಿದರು.