ದೇವನಹಳ್ಳಿ ತಾಲೂಕಿನಲ್ಲಿ ಗಲ್ಲುಗಣಿಗಾರಿಕೆಗೆ ಅನುಮತಿ ನೀಡದಂತೆ ಡಿಸಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಆ.11: ದೇವನಹಳ್ಳಿ ತಾಲೂಕಿನ ಕೊಯಿರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕಲ್ಲುಗಣಿಗಾರಿಕೆಗೆ ಅನುಮತಿ ನೀಡದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕಲ್ಲು ಗಣಿಗಾರಿಕೆಗೆ ನೀಡಿರುವ ಪರವಾನಗಿ ರದ್ದುಪಡಿಸುವಂತೆ ಕೋರಿ ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಈ ನಿರ್ದೇಶನ ನೀಡಿತು.
ಇದೇ ವೇಳೆ ಅರ್ಜಿಯ ಸಂಬಂಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಭೂವಿಜ್ಞಾನಿ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆ ತಡೆಯಲು ಕೈಗೊಂಡಿರುವ ಕ್ರಮಗಳ ಕುರಿತು ಸರಕಾರದಿಂದ ವಸ್ತುಸ್ಥಿತಿ ವರದಿ ತರಿಸಿಕೊಂಡು ನ್ಯಾಯಾಲಯಕ್ಕೆ ಒದಗಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಹಾಗೂ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಅಕ್ರಮ ಗಲ್ಲುಗಣಿಗಾರಿಕೆಯಿಂದಾಗಿ ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯಗಳು ಕಲುಷಿತಗೊಂಡಿವೆ. ಹೀಗಿದ್ದರೂ ಕಲ್ಲುಗಣಿಗಾರಿಕೆ ತಡೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ಅಕ್ರಮ ಕಲ್ಲುಗಣಿಗಾರಿಕೆ ತಡೆಯುವಂತೆ ಹಾಗೂ ಕಲ್ಲುಗಣಿಗಾರಿಕೆಗೆ ಪರವಾನಿಗೆ ನೀಡದಂತೆ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.