ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರಿಗೆ ಅಮಿತ್ ಶಾ ಕರೆ
ಬೆಂಗಳೂರು, ಆ.12: ರಾಜ್ಯ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವವರೆಗೆ ಬಿಜೆಪಿ ಕಾರ್ಯಕರ್ತರು ಸುಮ್ಮನೆ ಕೂರಬಾರದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ.
ಶನಿವಾರ ನಗರಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಅಮಿತ್‌ಶಾ, ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರಿಂದ ಸ್ವಾಗತ ಹಾಗೂ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ರಾಜ್ಯದಲ್ಲಿ ಬೂತ್‌ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಉದ್ದೇಶವನ್ನು ನಾನು ಹೊಂದಿದ್ದೇನೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು, ನನ್ನ ಈ ಸಂಕಲ್ಪಕ್ಕೆ ಕೈ ಜೋಡಿಸಬೇಕು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಗೆಲ್ಲಿಸಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೆ ಎದುರಿಸಲಾಗುವುದು. 2018ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಬಗ್ಗೆ ಯಾರಿಗೂ ಅನುಮಾನವೇ ಬೇಡ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡಲು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಅವರ ಚಾಣಕ್ಷತನದಿಂದ ಉತ್ತರಪ್ರದೇಶದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಅದೇ ರೀತಿಯ ಫಲಿತಾಂಶ ರಾಜ್ಯದಲ್ಲೂ ಮರುಕಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಅಮಿತ್ ಶಾಗೆ ಮೈಸೂರು ಪೇಟ ತೊಡಿಸಿ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ಪಕ್ಷದ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ನಾನಾಜೀ ದೇಶಮುಖ್ ವಾಚನಾಲಯ ಹಾಗೂ ಗ್ರಂಥಾಲಯವನ್ನು ಅಮಿತ್‌ಶಾ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್, ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದಲಿಂಬಾವಳಿ, ಶೋಭಾ ಕರಂದ್ಲಾಜೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.