ರೈತರ ಬೆಳೆ ಸಾಲ ಮನ್ನಾ ಬಗ್ಗೆ ಚಕಾರವೆತ್ತದ ಬಿಜೆಪಿ ಢೋಂಗಿ ಪಕ್ಷ: ಸಿದ್ದರಾಮಯ್ಯ

Update: 2017-08-12 16:07 GMT

ರಾಯಚೂರು/ಬೆಂಗಳೂರು, ಆ. 12: ‘ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಬೆಳೆ ಸಾಲ ಮನ್ನಾ ಬಗ್ಗೆ ಚಕಾರವೆತ್ತದ ಬಿಜೆಪಿಗೆ ಮತ್ತೊಂದು ಹೆಸರು ಢೋಂಗಿ ಪಕ್ಷ, ಆ ಪಕ್ಷದ ಮುಖಂಡರು ಢೋಂಗಿ ನಾಯಕರು’ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ರಾಯಚೂರಿನಲ್ಲಿ ಏರ್ಪಡಿಸಿದ್ದ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಹಕಾರ ಬ್ಯಾಂಕ್‌ಗಳ ಮೂಲಕ ರೈತರು ಪಡೆದಿರುವ 50 ಸಾವಿರ ರೂ. ವರೆಗಿನ ರೈತರ ಸಾಲ ಮನ್ನಾ ಘೋಷಣೆ ಮಾಡಲಾಗಿದೆ. ಆದರೆ, ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ರೈತರು ಪಡೆದಿರುವ ಸಾಲ ಮನ್ನಾ ಘೋಷಿಸಬೇಕು ಎಂದು ಆಗ್ರಹಿಸಿದರು.

ಸಾಲ ಮನ್ನಾ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆಂದು ಎಚ್ಚರಿಸಿದ ಮಾಜಿ ಸಿಎಂ ಯಡಿಯೂರಪ್ಪ, ಇದೀಗ ರೈತರ ಸಾಲ ಮನ್ನಾ ಬಗ್ಗೆ ಬಾಯಿ ಬಿಡುತ್ತಿಲ್ಲ. ಅವರಿಗೆ ಈಗಲೂ ಕಾಲ ಮುಂಚಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಲಕ ರೈತರು ಪಡೆದಿರುವ ಸಾಲ ಮನ್ನಾಕ್ಕೆ ಪ್ರಧಾನಿ ಮೋದಿ ಮೇಲೆ ಒತ್ತಡ ಹೇರಲು ಲೋಕಸಭೆಗೆ ಮುತ್ತಿಗೆ ಹಾಕಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಅಭಿವೃದ್ಧಿಗೆ ಆದ್ಯತೆ: ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಬಳಿಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ 2,500 ಕೋಟಿ ರೂ. ನೀಡಿದ್ದು, ಪ್ರಸಕ್ತ ವರ್ಷ 1,500 ಕೋಟಿ ರೂ.ವೆಚ್ಚ ಮಾಡಲಾಗುವುದು ಎಂದ ಸಿದ್ದರಾಮಯ್ಯ, ಹೈ.ಕ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಶೂನ್ಯ ಎಂದು ಟೀಕಿಸಿದರು.

ಸಾಮಾಜಿಕ ನ್ಯಾಯ, ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ವಿರೋಧಿಗಳು ಬಿಜೆಪಿಯವರು. ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆಯನ್ನು ಬಿಜೆಪಿ ಮುಖಂಡರು ಉಳಿಸಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಕೋಮುವಾದದ ವಿಷಬೀಜ ಬಿತ್ತುವ ಪ್ರಯತ್ನದಲ್ಲಿ ಬಿಜೆಪಿ ತೊಡಗಿದ್ದು, ಅದಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರಲಿ ಎಂದು ಬೊಬ್ಬೆ ಹಾಕುತ್ತಿದ್ದಾರೆಂದ ಅವರು, ‘ಬಿಜೆಪಿ ನಡಿಗೆ ದಲಿತರ ಮನೆ ಕಡೆಗೆ’ ಎಂದು ಆ ಪಕ್ಷದ ನಾಯಕರು, ದಲಿತರ ಮನೆಯಲ್ಲಿ ಹೊಟೇಲ್‌ನಿಂದ ತಿಂಡಿ ತಂದು ತಿಂದರು. ಆದರೆ, ನಾವು ಅಧಿಕಾರಕ್ಕೆ ಬಂದ ಬಳಿಕ ಪರಿಶಿಷ್ಟರ ಕಲ್ಯಾಣಕ್ಕೆ 86 ಸಾವಿರ ಕೋಟಿ ರೂ.ಒದಗಿಸಿದ್ದೇವೆ. ಈಗ ಹೇಳಿ ಯಾರು ದಲಿತರ ಪರ ಎಂದು ಪ್ರಶ್ನಿಸಿದರು.

‘ಕಾಂಗ್ರೆಸ್ ಮುಕ್ತ’ ದೇಶ ಎಂದು ಬಿಜೆಪಿ ಮುಖಂಡರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಇದೀಗ ಬಿಜೆಪಿಯವರು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಆದರೆ, ಆರೆಸೆಸ್ಸ್‌ನ ಯಾವ ನೇತಾರನೂ ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಹಸಿ ಸುಳ್ಳುಗಳ ಮೂಲಕ ದೇಶದ ಜನರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಗೆಲುವು ನಮ್ಮದೇ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್, ಸಚಿವರಾದ ಡಿ.ಕೆ.ಶಿವಕುಮಾರ್, ತನ್ವೀರ್ ಸೇಠ್ ಸೇರಿದಂತೆ ಪಕ್ಷದ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News