ನಾಳೆ ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಮುಖಂಡರ ಸಭೆ

Update: 2017-08-13 14:11 GMT

ಬೆಂಗಳೂರು, ಆ.13: ರಾಜ್ಯದಲ್ಲಿನ ಬರ ಸ್ಥಿತಿ, ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ‘ಮಹದಾಯಿ’ ಸಮಸ್ಯೆ ಚರ್ಚೆಗೆ ನಾಳೆ(ಆ.14) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಮುಖಂಡರು, ಸಂಸದರ ಹಾಗೂ ಆ ಭಾಗದ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ.

ರಾಜ್ಯದಲ್ಲಿ ತೀವ್ರ ಸ್ವರೂಪದ ಮಳೆ ಕೊರತೆ ಹಿನ್ನೆಲೆಯಲ್ಲಿ ಶೇ.50ಕ್ಕೂ ಹೆಚ್ಚು ಪ್ರದೇಶದಲ್ಲಿ ಬರ ಸ್ಥಿತಿ ಆವರಿಸಿದೆ. ಕಾವೇರಿ ನದಿ ಕೊಳ್ಳದ ಕೆಆರ್‌ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಪ್ರಮಾಣ ಅತ್ಯಂತ ಕಡಿಮೆ ಇದೆ. ಪ್ರಸ್ತುತ ಜಲಾಶಯದಲ್ಲಿರುವ ನೀರನ್ನು ಕೆರೆಕಟ್ಟೆಗಳಿಗೆ ಬಿಡಲಾಗುತ್ತಿದ್ದು, ಇದಕ್ಕೂ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು, ವೆೆುಸೂರು ಕಾವೇರಿ ನದಿ ಕೊಳ್ಳದ ಪ್ರದೇಶಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ಸೃಷ್ಟಿಯಾಗಿದ್ದು, ಈ ಬಗ್ಗೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ. ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ಅಲ್ಲದೆ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸುವುದು ಹಾಗೂ ಪ್ರಧಾನಿ ಬಳಿಗೆ ರಾಜ್ಯದ ನಿಯೋಗ ಕೊಂಡೊಯ್ಯುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಕ್ಕೆ ಭೇಟಿ ನೀಡಿದ್ದು, ಈ ವೇಳೆ ಮಹದಾಯಿ ವಿಷಯ ಸಂಬಂಧ ಸರ್ವಪಕ್ಷಗಳ ಸಭೆ ನಡೆಸುತ್ತಿರುವುದು, ಬಿಜೆಪಿ ಮುಖಂಡರು ಈ ವಿವಾದ ಸಂಬಂಧ ಯಾವ ನಿಲುವು ತಳೆಯಲಿದ್ದಾರೆಂಬುದು ತೀವ್ರ ಕುತೂಹಲ ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News