×
Ad

ಡೆಂಗ್ ನಿಯಂತ್ರಣಕ್ಕೆ ಸಮನ್ವಯದಿಂದ ಕಾರ್ಯನಿರ್ವಹಿಸಿ: ಡಿಸಿ

Update: 2017-08-14 21:03 IST

ಉಡುಪಿ, ಆ.14: ಜಿಲ್ಲೆಯಲ್ಲಿ ಡೆಂಗ್ ರೋಗದ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

 ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳಾದ ಕಲ್ಲುಕೋರೆ ಗಳಲ್ಲಿ ಸೊಳ್ಳೆ ಬೆಳವಣಿಗೆ ತಡೆಯಲು ಮೀನುಗಳನ್ನು ಬಿಡುವ ಕುರಿತಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಕ್ರಮ ಕೈಗೊಳ್ಳುವಂತೆ ಹಾಗೂ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುವ ಕಟ್ಟಡಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡು ಬಂದರೆ ಅಂತಹ ಕಟ್ಟಡ ಮಾಲೀಕರಿಂದ ದಂಡ ವಸೂಲಿ ಮಾಡುವ ಕುರಿತ ನಿರ್ಣಯವನ್ನು ತಮ್ಮ ಬೈಲಾಗಳಲ್ಲಿ ಅಳವಡಿಸಿಕೊಳ್ಳುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದರು.

ಜಿಲ್ಲೆಯ ಪ್ರತಿ ಮನೆಮನೆಗೆ ಹಾಗೂ ಶಾಲೆಗಳಲ್ಲಿ ಡೆಂಗ್ ಕುರಿತು ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆಯೂ ಪ್ರಿಯಾಂಕ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು.

ಜಿಲ್ಲೆಯಲ್ಲಿ 2016ರಲ್ಲಿ 360 ಡೆಂಗ್ ಪ್ರಕರಣ ಕಂಡುಬಂದಿದ್ದು, ಈ ವರ್ಷ ಮುನ್ನೆಚ್ಚರಿಕೆ ಕೈಗೊಂಡ ಹಿನ್ನಲೆಯಲ್ಲಿ ಪ್ರಕರಣಗಳ ಸಂಖ್ಯೆ 232ಕ್ಕೆ ಇಳಿದಿದೆ ಹಾಗೂ ಡೆಂಗ್ ಸಂಶಯದ ಯಾವುದೇ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರೇಮಾನಂದ ಮಾಹಿತಿ ನೀಡಿದರು.
ಸಭೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News