ಜಿಪಂ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ ಸ್ವೀಕರಿಸುವ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಕೆ

Update: 2017-08-17 17:28 GMT

ಬೆಂಗಳೂರು, ಆ.17: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ರಾಜೀನಾಮೆ ಸ್ವೀಕರಿಸುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

   ಈ ಕುರಿತಂತೆ ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್, ಬೆಂಗಳೂರು ಗ್ರಾಮಾಂತರ ಅಧ್ಯಕ್ಷ ಸಿ.ಮುನಿರಾಜು, ತುಮಕೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಲತಾ ರವಿಕುಮಾರ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

 ಪ್ರತಿವಾದಿಗಳಾದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹಾಗೂ ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.

  ಅಧ್ಯಕ್ಷ, ಉಪಾಧ್ಯಕ್ಷ ಅವಧಿ ಐದು ವರ್ಷ. ಈ ಅವಧಿಯ ಮಧ್ಯೆ ರಾಜೀನಾಮೆ ಸಲ್ಲಿಸುವ ಮತ್ತು ಅದನ್ನು ಸ್ವೀಕರಿಸುವ ಕ್ರಮ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ ಕಾಯ್ದೆಗೆ ವಿರುದ್ಧವಾದುದು ಹಾಗೂ ಸಂವಿಧಾನದ 14ನೆ ವಿಧಿಯ ಉಲ್ಲಂಘನೆ ಎಂಬುದು ಅರ್ಜಿದಾರರ ಆರೋಪ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News