ದೇವರಾಜ ಅರಸು ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ಬೆಂಗಳೂರು, ಆ.18: 2017ನೆ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕೀಯ ಮುತ್ಸದ್ದಿ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಪ್ರೊ.ಹಂಪ ನಾಗರಾಜಯ್ಯ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸಮ್ಮುಖದಲ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಕಟಿಸಿದರು.
ಆ.20ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ದೇವರಾಜ ಅರಸು ಅವರ 102ನೆ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು.
ದೇವರಾಜ ಅರಸು ಅವರ ಒಡನಾಡಿಯಾಗಿದ್ದು, ಜೀವನದುದ್ದಕ್ಕೂ ಸಮಾಜವಾದಿ ಹಾಗೂ ಜಾತ್ಯತೀತ ಆಶಯಗಳನ್ನು ಅಳವಡಿಸಿಕೊಂಡು ಅದಕ್ಕೆ ಬದ್ಧರಾಗಿ ದುಡಿಯುತ್ತಿರುವ ಮಲ್ಲಿಕಾರ್ಜುನ ಖರ್ಗೆಗೆ ಪ್ರಶಸ್ತಿ ಸಿಗುತ್ತಿರುವುದು ಸಂತಸ ತಂದಿದೆ. ಈ ಪ್ರಶಸ್ತಿಯು ಎರಡು ಲಕ್ಷ ರೂ.ನಗದು ಹಾಗೂ ಫಲಕವನ್ನು ಹೊಂದಿರುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಡಾ.ಬಂಜಗೆರೆ ಜಯಪ್ರಕಾಶ್, ಡಾ.ಬಿ.ಕೆ.ರವಿ, ಪ್ರೊ.ಎನ್.ವಿ.ನರಸಿಂಹಯ್ಯ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.