×
Ad

ಭ್ರಷ್ಟಾಚಾರದ ದಾಖಲೆ ಇದ್ದರೆ ಬಹಿರಂಗಪಡಿಸಿ : ಬಿಜೆಪಿ ಮುಖಂಡರಿಗೆ ಡಾ.ಜಿ ಪರಮೇಶ್ವರ್ ಸವಾಲು

Update: 2017-08-18 20:49 IST

ಬೆಂಗಳೂರು, ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಸಂಪುಟದ ಯಾವುದೇ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿರುವ ಸೂಕ್ತ ದಾಖಲೆಗಳಿದ್ದರೆ ಬಿಡುಗಡೆ ಮಾಡಿದರೆ, ಅದಕ್ಕೆ ರಾಜ್ಯ ಸರಕಾರ ಉತ್ತರ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸವಾಲು ಹಾಕಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲಿ ಭ್ರಷ್ಟಾಚಾರ ನಡೆದಿದೆ, ಯಾವ ಸಚಿವರು ಅದರಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಅದು ಬಿಟ್ಟು ಸುಖಾಸುಮ್ಮನೆ ಆರೋಪ ಸರಿಯಲ್ಲ ಎಂದು ಆಕ್ಷೇಪಿಸಿದರು.

ಬಿಜೆಪಿ ಮುಖಂಡರು ಸುಳ್ಳು ಆರೋಪಗಳಿಗೆ ಕಾಂಗ್ರೆಸ್ ಕೂಡ ರಾಜಕೀಯವಾಗಿ ಸಮರ್ಥವಾಗಿ ಉತ್ತರ ನೀಡಲಿದೆ ಎಂದ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭ್ರಮೆಯಲ್ಲಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂಧನ ಸಚಿವ ಶಿವಕುಮಾರ್, ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಪಕ್ಷವೂ ಹೋರಾಟದ ಮೂಲಕವೇ ಉತ್ತರ ನೀಡಲಿದೆ ಎಂದು ಪರಮೇಶ್ವರ್ ಇದೇ ವೇಳೆ ಎಚ್ಚರಿಕೆ ನೀಡಿದರು.

ಆದಾಯ ತೆರಿಗೆ ದಾಳಿ ನಡೆದಿರುವುದು ಸತ್ಯ. ಅದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಏನೇನು ಸಿಕ್ಕಿದೆ ಎನ್ನುವ ಬಗ್ಗೆ ಐಟಿ ಮಾಹಿತಿ ನೀಡಿಲ್ಲ. ಒಂದು ವೇಳೆ ಸಿಕ್ಕಿದ್ದರೆ ಕಾನೂನು ರೀತಿ ಕ್ರಮಕೈಗೊಳ್ಳಲಿದೆ ಎಂದ ಅವರು, ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ, ನಗದು ಸಿಕ್ಕಿದೆ ಎನ್ನುವ ಬಗ್ಗೆ ಐಟಿ ಬಿಜೆಪಿ ನಾಯಕರಿಗೆ ಮಾಹಿತಿ ನೀಡಿದೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

ಒಂದು ವೇಳೆ ಮಾಹಿತಿ ಗೊತ್ತಿದ್ದರೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದಲೇ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂಬುದು ಗೊತ್ತಾಗುತ್ತದೆ ಎಂದ ಅವರು, ಚುನಾವಣಾ ವರ್ಷವಾಗಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷವೂ ಪ್ರತಿ ಹೋರಾಟ ನಡೆಯಲಿದೆ. ಬಿಜೆಪಿಯ ಸುಳ್ಳು ಆರೋಪಕ್ಕೆ ಕಾಂಗ್ರೆಸ್ ಪಕ್ಷ ಸತ್ಯವನ್ನು ರಾಜ್ಯದ ಜನರಿಗೆ ತಿಳಿಸಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News