ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ಇರಲಿ: ವಿಜಯಕುಮಾರ್
ಬೆಂಗಳೂರು, ಆ.19: ಸಾರ್ವಜನಿಕರು ಜೇಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶಮೂರ್ತಿ ಪೂಜಿಸಿ, ವಿಸರ್ಜಿಸಬೇಕು ಎಂದು ಶಾಸಕ ಬಿ.ಎನ್.ಜಯಕುಮಾರ್ ಮನವಿ ಮಾಡಿದ್ದಾರೆ.
ಶನಿವಾರ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಬಾಂಧವ್ಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡುವುದರಿಂದ ಜಲ ಮಾಲಿನ್ಯ ಉಂಟಾಗುತ್ತದೆ. ದೇವರ ಹೆಸರಿನಲ್ಲಿ ಜಲ ಮಾಲಿನ್ಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ್ದ ಗಣೇಶ ಮೂರ್ತಿಗಳು ನೀರಿನಲ್ಲಿ ಕರಗುವುದಿಲ್ಲ. ನೀರಿನ ಮೇಲೆ ತೇಲುತ್ತಾ, ಆ ಮೂರ್ತಿಯ ಅಲಂಕಾರಕ್ಕಾಗಿ ಬಳಸಿದ ಬಣ್ಣಗಳು ಹಾಗೂ ರಾಸಾಯನಿಕ ವಸ್ತುಗಳು ನೀರಿನಲ್ಲಿ ಕರಗಿ ಜಲಚರಗಳ ಮರಣಕ್ಕೆ ಕಾರಣವಾಗಲಿದೆ. ಈ ಬಗ್ಗೆ ಜನತೆ ಎಚ್ಚರ ವಹಿಸುವ ಮೂಲಕ ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಪಾಲಿಕೆ ಸದಸ್ಯ ಎನ್.ನಾಗರಾಜ್ ಮಾತನಾಡಿ, ಗೌರಿಗಣೇಶ ಹಬ್ಬದ ಪ್ರಯುಕ್ತ ಜನತೆಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉಚಿತವಾಗಿಯೇ ವಿತರಣೆ ಮಾಡಲಾಗುವುದು. ಆ ಮೂಲಕ ಪರಿಸರ ಕುರಿತು ಜನತೆಯಲ್ಲಿ ಅರಿವನ್ನು ಮೂಡಿಸಲಾಗುತ್ತಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಾಗಿ ದೂ. 9740399888 ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.