ದೇವರಾಜ ಅರಸು ಸಾಮಾಜ ಸುಧಾರಣೆಯ ಹರಿಕಾರ: ಅಪ್ಪಚ್ಚು ರಂಜನ್

Update: 2017-08-20 12:16 GMT

ಮಡಿಕೇರಿ, ಆ.20: ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಸೇರಿದಂತೆ ನಾನಾ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೇಳಿದರು.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 102 ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯಗಳ ಆರಂಭ, ಶಿಷ್ಯವೇತನ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು. ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಬದಲಾವಣೆ ಜೊತೆಗೆ ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೊಳಿಸಿದರು ಎಂದು ಶಾಸಕರು ಸ್ಮರಿಸಿದರು.

ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ಮಾತನಾಡಿ, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದರೂ ಸಹ ಡಿ.ದೇವರಾಜ ಅರಸು ಅವರನ್ನೇ ಮುಖ್ಯಮಂತ್ರಿ ಎಂದೇ ರಾಜ್ಯದ ಜನ ಭಾವಿದಸಿದ್ದರು, ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಜನತೆಗೆ ಡಿ.ದೇವರಾಜ ಅರಸು ಅವರು ಜನ ಮೆಚ್ಚುವ ಕಾರ್ಯಕ್ರಮಗಳೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.

ಡಿ.ದೇವರಾಜ ಅರಸು ಅವರು ಪರರ ಹಿತಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಆ ಮೂಲಕ ಅಜಾರಾಮರಾಗಿದ್ದಾರೆ. ಡಿ.ದೇವರಾಜ ಅರಸು ಅವರು ಕಟ್ಟಕಡೆಯ ಜನರನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು ಎಂದರು.

ಜಿಪಂ ಉಪಾಧ್ಯಕ್ಷ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಪುಸ್ತಕಗಳನ್ನು ಅಧ್ಯಯನ ಮಾಡಿ ತಮ್ಮದೇ ಆದ ಸಾಮಾಜಿಕ ನಿಲುವನ್ನು ಜಾರಿಗೆ ತರಲು ಪ್ರಯತ್ನಿಸಿದರು. ನಿರಂತರ ಅಧ್ಯಯನ ಶೀಲತೆ ಜೊತೆಗೆ ಚಲನಶೀಲತೆಯನ್ನು ಅರಸು ಮೈಗೂಡಿಸಿಕೊಂಡಿದ್ದರು ಎಂದು ಅವರು ತಿಳಿಸಿದರು.

ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ವಿಜು ಸುಬ್ರಹ್ಮಣಿ ಅವರು ಮಾತನಾಡಿ, ಡಿ.ದೇವರಾಜ ಅರಸು ಅವರು ಜನಸಾಮಾನ್ಯರ ಅಭಿವೃದ್ಧಿಗೆ ಶ್ರಮಿಸಿದರು, ಜನರ ಕಷ್ಟ ಕಾರ್ಪಣ್ಯಗಳನ್ನು ಆಲಿಸಿದರು, ಜನಪರ ಆಡಳಿತದಿಂದಾಗಿ ಜನಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ನುಡಿದರು.  

ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯ ಸರೋಜಮ್ಮ ಅವರು ಮಾತನಾಡಿ, ಡಿ.ದೇವರಾಜ ಅರಸು ಅವರ ಆಡಳಿತಾವಧಿಯ 80ರ ದಶಕವನ್ನು ಸಾಮಾಜಿಕ ಕಳಕಳಿಯ ದಶಕ ಎಂದರೆ ತಪ್ಪಾಗಲಾರದು. ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ, ಸಾಮಾಜಿಕ ಕ್ರಾಂತಿಯ ಮಹಾನ್ ವ್ಯಕ್ತಿ ಡಿ.ದೇವರಾಜ ಅರಸು, ಸ್ವಾತಂತ್ರ್ಯ ಭಾರತದಲ್ಲಿ ಗೌರವದಿಂದ ಬಾಳಲು ಸಂವಿಧಾನ ಅವಕಾಶ ನೀಡಿದೆ. ಆ ನಿಟ್ಟಿನಲ್ಲಿ ಡಿ.ದೇವರಾಜ ಅರಸು ಅವರು ಬಡವರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. ಜನ ಸಾಮಾನ್ಯರಲ್ಲಿ ಬದುಕುವ ವಿಶ್ವಾಸ ಮೂಡಿಸಿದರು ಎಂದು ಹೇಳಿದರು.

ಉಚಿತ ಶಿಕ್ಷಣ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಯೋಜನಾ ಆಯೋಗ ಸೇರಿದಂತೆ ಡಿ.ದೇವರಾಜ ಅರಸು ಅವರು ಜಾರಿಗೊಳಿಸಿದ ನಾನಾ ಕಾರ್ಯಕ್ರಮಗಳನ್ನು ರಾಷ್ಟ್ರಮಟ್ಟದಲ್ಲಿ ಅನುಕರಣೆ ಮಾಡಲಾಯಿತು. 20 ಅಂಶಗಳ ಕಾರ್ಯಕ್ರಮಗಳ ಯಶಸ್ವಿಯಾಗಿ ಅನುಷ್ಠಾನವಾಗಲು ಡಿ.ದೇವರಾಜ ಅರಸು ಅವರು ಕಾರಣ ಎಂದು ಅವರು ನುಡಿದರು.

 ಸರ್ಕಾರ ಬಡವರಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳು ಶೋಷಿತರು, ದುರ್ಬಲರಿಗೆ ತಲುಪಬೇಕು. ಹಾಗಾದಾಗ ಮಾತ್ರ ಡಿ.ದೇವರಾಜ ಅರಸು ಅವರ ಕನಸು ನನಸಾಗಲು ಸಾಧ್ಯ. ವಿದ್ಯಾರ್ಥಿಗಳು ಸಹ ಸರ್ಕಾರದ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, 12ನೆ ಶತಮಾನದಲ್ಲಿ ಬಸವಣ್ಣ, 20 ನೆ ಶತಮಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೆಯೇ ಡಿ.ದೇವರಾಜ ಅರಸು ಅವರು ಸಾಮಾಜಿಕ ಮತ್ತು ಪ್ರಗತಿಪರ ಸುಧಾರಣೆಗಳನ್ನು ಜಾರಿಗೊಳಿಸಿದರು ಎಂದು ವಿವರಿಸಿದರು. 

ದೇಶದಲ್ಲಿ ಕೇರಳ ಮತ್ತು ಪಶ್ಚಿಮ ಬಂಗಾಳ ಕಮ್ಯುನಿಷ್ಟ್ ರಾಜ್ಯಗಳನ್ನು ಹೊರತುಪಡಿಸಿದರೆ, ಕರ್ನಾಟಕದಲ್ಲಿ ಮಾತ್ರ ಭೂ ಸುಧಾರಣೆ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳ್ಳಲು ಕಾರಣವಾಯಿತು. ಇದಕ್ಕೆ ಡಿ.ದೇವರಾಜ ಅರಸು ಅವರ ಆಡಳಿತವೇ ಕಾರಣ ಎಂದರು.    
ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ದೇವರಾಜ ಅರಸು ಅವರ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆ, ಭಾಷಣ ವಿಭಾಗದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

 ಕಾರ್ಯಕ್ರಮಕ್ಕೂ ಮೊದಲು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಪೌರಾಯುಕ್ತರಾದ ಬಿ.ಶುಭಾ, ಆಹಾರ ಇಲಾಖೆ ಉಪ ನಿರ್ದೇಶರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ದಶರಥ ಎಂ.ದಾಮೋಜಿ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಬಿಸಿಎಂ ಇಲಾಖೆಯ ವ್ಯವಸ್ಥಾಪಕರಾದ ಪುಟ್ಟರಾಜು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ನಿಲಯ ಮೇಲ್ವೀಚಾರಕರು, ತಾಲ್ಲೂಕು ವಿಸ್ತರಣಾಧಿಕಾರಿಗಳು, ಸಿಬ್ಬಂದಿಗಳು ವಿದ್ಯಾರ್ಥಿಗಳು  ಮತ್ತಿತರರು ಭಾಗವಹಿಸಿದ್ದರು. 
ಕುಶಾಲನಗರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಪಲ್ಲವಿ ಮತ್ತು ಚೈತನ್ಯ ಅವರು ನಾಡಗೀತೆ ಹಾಡಿದರು, ಸುಪ್ರಭಾ ಅವರು ಪ್ರಾರ್ಥಿಸಿದರು, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್ ಅವರು ಸ್ವಾಗತಿಸಿ, ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News