ಆ.23ರಂದು ಮುತವಲ್ಲಿ ಸಮಾವೇಶ: ಬಿ.ಎಸ್.ರಫೀವುಲ್ಲಾ

Update: 2017-08-21 13:25 GMT

ಬೆಂಗಳೂರು, ಆ.21: ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಕ್ಫ್ ಸಂಸ್ಥೆಗಳ ಮುತವಲ್ಲಿಗಳ ಸಮಾವೇಶವನ್ನು ಆ.23ರಂದು ಬೆಳಗ್ಗೆ 11     ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ ತಿಳಿಸಿದ್ದಾರೆ.

ಸೋಮವಾರ ನಗರದ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿರುವ ರಾಜ್ಯ ವಕ್ಫ್‌ಬೋರ್ಡ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುತವಲ್ಲಿ ಸಮಾವೇಶವನ್ನು ಉದ್ಘಾಟಿಸಲಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್‌ಸೇಠ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಸಮಾವೇಶದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ 2013ರ ಮಹತ್ವ, ವಕ್ಫ್ ಆಸ್ತಿಗಳ ನೋಂದಣಿ, ಅನುದಾನ ವಂಚಿತ ಸಂಸ್ಥೆಗಳಿಗೆ ಅನುದಾನ ಕಲ್ಪಿಸುವುದು, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಸಮೀಕ್ಷೆ, ಗೌರವಧನ ಪಡೆಯುವಲ್ಲಿ ವಿಫಲವಾಗಿರುವ ಪೇಷ್ ಇಮಾಮ್ ಹಾಗೂ ವೌಝನ್‌ಗಳ ನೋಂದಣಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ ಎಂದು ಹೇಳಿದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ 1200 ವಕ್ಫ್ ಸಂಸ್ಥೆಗಳಿವೆ. ಪ್ರತಿಯೊಂದು ಸಂಸ್ಥೆಯಿಂದ ಮುತವಲ್ಲಿ ಹಾಗೂ ಕಾರ್ಯದರ್ಶಿಗಳನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಸುಮಾರು 2 ರಿಂದ 2500 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಫೀವುಲ್ಲಾ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯ್ಯದ್ ಶುಜಾವುದ್ದೀನ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಬಿ.ಬಾಷ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News