ರಾಜ್ಯ ಸರಕಾರದಿಂದ ಎಸಿಬಿ ದುರ್ಬಳಕೆ : ಶಾಸಕ ಕೆ.ಜಿ.ಬೋಪಯ್ಯ ಆರೋಪ

Update: 2017-08-22 13:24 GMT

ಮಡಿಕೇರಿ, ಆ.22 : ನಿರಂತರ ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ನಿಗ್ರಹ ದಳವನ್ನು ತನಗಿಷ್ಟ ಬಂದಂತೆ ಬಳಸಿಕೊಳ್ಳುವ ಮೂಲಕ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.

ನಗರದ ಬಾಲಭವನದಲ್ಲಿ ನಡೆದ  ಮಡಿಕೇರಿ ತಾಲೂಕು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ  ಪಾಲ್ಗೊಂಡು ಮಾತನಾಡಿದ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ರಾಜ್ಯ  ಸರಕಾರ   ದಕ್ಷ ಅಧಿಕಾರಿಗಳಿಗೆ ಹಾಗೂ ಪ್ರಮಾಣಿಕರಿಗೆ  ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ಅವರು ಲೋಕಾಯುಕ್ತದ ಬಲ ಕುಗ್ಗಿಸಿ ಎಸಿಬಿಯನ್ನು  ರಚಿಸುವ ಮೂಲಕ ಅಧಿಕಾರ ದುರ್ಬಳಕೆಗೆ ರಾಜ್ಯ ಕಾಂಗ್ರೆಸ್ ಸರಕಾರ ನಾಂದಿ ಹಾಡಿತು ಎಂದು ಟೀಕಿಸಿದರು. ಎಸಿಬಿಯನ್ನು ಬಳಸಿಕೊಂಡು ಬಿಜೆಪಿ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‍ಗೆ ಪಕ್ಷ ತಕ್ಕ ಉತ್ತರವನ್ನು ನೀಡಲಿದೆ ಎಂದು ಕೆ.ಜಿ.ಬೋಪಯ್ಯ ಹೇಳಿದರು.

ರಾಜ್ಯ  ಸರಕಾರದ ಜನ ವಿರೋಧಿ ನೀತಿಯಿಂದ ಜನಸಾಮಾನ್ಯರು  ತತ್ತರಿಸಿದ್ದಾರೆ. ಜನತೆಗೆ ಬೆಜೆಪಿ ಸರಕಾರದ ಅಗತ್ಯವಿದ್ದು, ಈಗಿನಿಂದಲೇ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.

ಪಕ್ಷದಲ್ಲಿ  ಯಾವುದೇ ಫಲಾಪೇಕ್ಷೆಗಳನ್ನು ಇಟ್ಟುಕೊಳ್ಳದೆ ಪ್ರಾಮಾಣಿಕವಾಗಿ  ಕಾರ್ಯ ನಿರ್ವಹಿಸಿದಾಗ ಮಾತ್ರ ಅವರವರ ಅರ್ಹತೆಗೆ ಅನುಗುಣವಾಗಿ ಸ್ಥಾನ ಲಭಿಸಲಿದೆ ಎಂದು ಅಭಿಪ್ರಾಯಪಟ್ಟ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

 ಪಕ್ಷದ ರಾಷ್ಟ್ರೀಯ  ಅಧ್ಯಕ್ಷ ಅಮಿತ್‍ಷಾ ಭೇಟಿ ಪಕ್ಷದ ಕಾರ್ಯಕರ್ತರಿಗೆ  ಹೊಸ ಹುರುಪನ್ನು ನೀಡಿದೆ. ಶಾಸಕರುಗಳು ತಮ್ಮ  ಕ್ಷೇತ್ರವನ್ನು ಗಟ್ಟಿಗೊಳಿಸುವುದರ ಜೊತೆಗೆ  ಮತ್ತೊಂದು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗಿದೆ. ಪ್ರತಿ ದಿನ  ಶಾಸಕರು ಹಾಗೂ ಕಾರ್ಯಕರ್ತರು  ಮತದಾರರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಸುವ ಕಾರ್ಯ ನಡೆಯಲಿದೆ ಎಂದರು.

ವಿಧಾನ ಪರಿಷತ್  ಸದಸ್ಯರಾದ  ಸುನಿಲ್ ಸುಬ್ರಮಣಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಗೆ ಹಾಲಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಅವರುಗಳೇ ಅಭ್ಯರ್ಥಿಗಳೆಂದು ತಿಳಿಸಿದರು. ಕಾಂಗ್ರೆಸ್ ಸರಕಾರದ ಬಳಿ ಅಭಿವೃದ್ಧಿಗೆ ಹಣ ಕೇಳಿದರೆ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ ಸುನೀಲ್ ಸುಬ್ರಮಣಿ, ಮುಖ್ಯಮಂತ್ರಿಗಳು ಎಸಿಬಿಯನ್ನು ಬಳಸಿಕೊಂಡು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಬಿಜೆಪಿ  ರಾಜ್ಯ ಕಾರ್ಯದರ್ಶಿ ಮನು ಮುತ್ತಪ್ಪ, ಮಡಿಕೇರಿ  ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳ ಶ್ರಮ ಹಾಗೂ ನಾಯಕರ  ಮಾರ್ಗದರ್ಶನದಿಂದ ಪಕ್ಷ ಸದೃಢವಾಗಿದೆ ಎಂದರು. ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಎಸಿಬಿಯನ್ನು ಸ್ವಾರ್ಥ ಕಾರ್ಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ತಳೂರು ಕಿಶೋರ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ಕಾಳನ ರವಿ, ಪ್ರಮುಖರಾದ ಕೋಡಿರ ಪ್ರಸನ್ನ, ರವಿ ಬಸಪ್ಪ, ನಾಗೇಶ್ ಕುಂದಲ್ಪಾಡಿ, ಡೀನ್ ಬೋಪಣ್ಣ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News