ರಾಜ್ಯ ಮುಕ್ತ ವಿವಿಗೆ ಮಾನ್ಯತೆ ಆಗ್ರಹಿಸಿ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

Update: 2017-08-22 16:32 GMT

ಬೆಂಗಳೂರು, ಆ.22: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮಾನ್ಯತೆ ನೀಡುವಂತೆ ಯುಜಿಸಿಗೆ ಸೂಚನೆ ನೀಡುಬೇಕೆಂದು ಕೋರಿ ಪ್ರಧಾನಮಂತ್ರಿ ನರೇಂದ್ರಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯತೆ ರದ್ದಾದ ಹಿನ್ನೆಲೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಆದುದರಿಂದ, ಅವರ ಭವಿಷ್ಯದ ಹಿತ ದೃಷ್ಟಿಯಿಂದ ಖುದ್ದಾಗಿ ಈ ವಿಷಯವನ್ನು ಪರಿಗಣಿಸಿ ಸಕಾರಾತ್ಮಕ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಯುಜಿಸಿ ಕೇಳಿರುವ ಎಲ್ಲ ದಾಖಲೆಗಳನ್ನು ಒದಗಿಸಲಾಗಿದೆ. ಅಲ್ಲದೆ, ಪುನಃ ಮಾನ್ಯತೆಯನ್ನು ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದರೆ, ಈವರೆಗೆ ಯುಜಿಸಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಪ್ರಧಾನಿಗೆ ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ವಿಶ್ವವಿದ್ಯಾನಿಲಯದಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರಾಗಿದ್ದಾರೆ. ಯುಜಿಸಿ ಮಾನ್ಯತೆ ರದ್ದುಗೊಳಿಸಿರುವುದರಿಂದ ಈ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ 2015ರಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ರದ್ದುಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News