ದೇಶದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು: ಎಂ.ಕೆ. ಪ್ರಾಣೇಶ್

Update: 2017-08-22 15:43 GMT

ಚಿಕ್ಕಮಗಳೂರು, ಆ.22: ದೇಶದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ದುಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ತಿಳಿಸಿದರು.

ಅವರು ಮಂಗಳವಾರ ಗ್ರಾಪಂ, ತಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಜಿಪಂ ಸದಸ್ಯರುಗಳಿಗೆ ಹಾಗೂ ಅಧಿಕಾರಿಗಳಿಗೆ ಜಿಪಂ ಸಭಾಂಗಣದಲ್ಲಿ ನಡೆದ ನವ ಭಾರತ ಸಂಕಲ್ಪ (ನವ ಭಾರತ ಚಳುವಳಿ 2017-22) ಕುರಿತ ಸಮಾವೇಶದಲ್ಲಿ ಮಾತನಾಡಿದರು. ದೇಶದ ಏಕತೆಗೆ ಎಲ್ಲರೂ ಒಗ್ಗೂಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಜನಪ್ರತಿನಿಧಿಗಳು ದೇಶ ಕಟ್ಟುವ ಜವಾಬ್ದಾರಿ ಹೊಂದಿರಬೇಕು. ದೇಶದಲ್ಲಿನ ಬಡತನ ನಿರ್ಮೂಲನೆಗೆ ಶ್ರಮಿಸಬೇಕು. ಜಾತಿ ವರ್ಗಗಳಿಂದ ಹೊರತಾದ ಸಮಾಜ ನಿರ್ಮಾಣವಾಗಬೇಕು ಮೇಲು ಕೀಳು ಎಂಬ ಭಾವನೆ ಹೋದಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರಗಳು ಶ್ರೀ ಸಾಮಾನ್ಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಾದ ನಮ್ಮ ಮೇಲಿದೆ. ಸ್ವಚ್ಛತೆ ಕುರಿತು ಗ್ರಾಮಾಂತರ ಪ್ರದೇಶಗಳಲ್ಲಿ ಜನರಿಗೆ ಜನಪ್ರತಿನಿಧಿಗಳು ಅರಿವು ಮೂಡಿಸಬೇಕು. ನೈರ್ಮಲ್ಯದಿಂದಾಗುವ ದುಷ್ಟಪರಿಣಾಮಗಳ ಕುರಿತು ಅರಿವು ಮೂಡಿಸಿ ತಮ್ಮ ಗ್ರಾಮಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ತಿಳಿಸಬೇಕಲ್ಲದೆ ಶೌಚಾಲಯ ನಿರ್ಮಿಸಿಕೊಳ್ಳಲು ಜನರಲ್ಲಿ ಅರಿವು ಮೂಡಿಸಬೇಕು ಎಂದರು.

 ಜಿಪಂ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ಮಾತನಾಡಿ, ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಜನರಿಕ್ ಔಷಧಿ ಮಳಿಗೆಗಳನ್ನು ಈಗಾಗಲೇ ಜಿಲ್ಲಾ ತಾಲ್ಲೂಕು ಮಟ್ಟದಲ್ಲಿ ಪ್ರಾರಂಭಿಸಲಾಗಿದ್ದು, ಹೋಬಳಿ ಮಟ್ಟದಲ್ಲೂ ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು ಸರ್ಕಾರದ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.

 ಜಿಲ್ಲಾಧಿಕಾರಿ ಹಾಗೂ ಜಿಪಂ ಪ್ರಭಾರ ಸಿಇಓ ಜಿ.ಸತ್ಯವತಿ ಮಾತನಾಡಿ, ಜಿಲ್ಲೆಯನ್ನು ಅ.2ಕ್ಕೆ ಬಯಲು ಮಲ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಸಂಕಲ್ಪ ಮಾಡಲಾಗಿದೆ. ಈ ದಿಸೆಯಲ್ಲಿ ಶೌಚಾಲಯ ನಿರ್ಮಾಣವಾಗದ ಕಡೆಗಳಲ್ಲಿ ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಶೌಚಾಲಯ ನಿರ್ಮಾಣಕ್ಕೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

 ಜಿಪಂ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ಎಲ್ಲರಿಗೂ ಸಂಕಲ್ಪದಿಂದ ಸಾಧನೆಗೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಜಿಪಂ ನ ಉಪಕಾರ್ಯದರ್ಶಿ ರಾಜಗೋಪಾಲ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News