ವಿದ್ಯಾರ್ಥಿಗಳು ನವ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕು: ಸಂಸದ ಕೆ.ಎಚ್. ಮುನಿಯಪ್ಪ

Update: 2017-08-22 17:51 GMT

ಚಿಕ್ಕಬಳ್ಳಾಪುರ, ಆ.22: ವಿದ್ಯಾರ್ಥಿಗಳು ಹಾಗೂ ಯುವಕರು ದೇಶದ ಅಭಿವೃದ್ಧಿಯ ಶಿಲ್ಪಿಗಳಾಗಿದ್ದು, ಎಲ್ಲರೂ ವಿಜ್ಞಾನ ತಂತ್ರಜ್ಞಾನಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಪಡೆಯುವ ಮೂಲಕ ನವಭಾರತ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಸಂಸದ ಕೆ.ಎಚ್. ಮುನಿಯಪ್ಪ ಅಭಿಪ್ರಾಯಪಟ್ಟರು.

ನಗರದ ಎಸ್‍ಜೆಸಿಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಗತ ಹಾಗೂ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ನಿಂತಿದೆ. ಅದ್ದರಿಂದ ಯುವ ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ವೇಗವಾಗಿ ಮುನ್ನುಗ್ಗುತ್ತಿರುವ ಜಾಗತೀಕರಣ ಯುಗದಲ್ಲಿ ವಿಜ್ಞಾನ-ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಪಡೆದು ಭವ್ಯ ಭಾರತದ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು.

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕು ಎಂಬ ಸದುದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಗ್ರಾಮೀಣ ಭಾಗದ ಹಲವು ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಇಲ್ಲಿ ವಿದ್ಯಾಬ್ಯಾಸ ಮಾಡಿದ ವಿದ್ಯಾರ್ಥಿಗಳು ಸರ್ ಎಂ.ವಿಶ್ವೇಶ್ವರಯ್ಯ ಅವರ ರೀತಿಯಲ್ಲಿ ಉನ್ನತ ಮಟ್ಟಕ್ಕೆ ಏರಬೇಕು. ತಂದೆ ತಾಯಿಗಳಿಗೆ ಹಾಗೂ ಶಿಕ್ಷಕರಿಗೆ ಗೌರವ ತಂದುಕೊಡಬೇಕು ಎಂದರು.

ಬೆಂಗಳೂರಿನ ಟಾಟಾ ಕಲ್ಸಲ್‍ಟೆನ್ಸಿ ಸರ್ವಿಸಸ್‍ನ ಮುಖ್ಯಸ್ಥ ಇ.ಎಸ್.ಚಕ್ರವರ್ತಿ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಮೊದಲು ದೈಹಿಕ, ಮಾನಸಿಕ ಆರೋಗ್ಯದ ಸದೃಢತೆಯನ್ನು ಕಾಯ್ದುಕೊಳ್ಳಬೇಕು. ಪೌಷ್ಟಿಕ ಆಹಾರ ಸೇವನೆ ಜೊತೆಗೆ ಯೋಗ, ವ್ಯಾಯಾಮ, ವಿಶ್ರಾಂತಿ ಪಡೆದು ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು. ಆಗ ವಿದ್ಯೆಯು ತಾನಾಗಿಯೇ ಒಲಿಯುತ್ತದೆ ಎಂದ ಅವರು, ಪ್ರಸ್ತುತ ಜಾಗತೀಕರಣ ಯುಗದಲ್ಲಿ ವಿಜ್ಞಾನ ತಂತ್ರಜ್ಞಾನ ಆಧಾರಿತ ಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ಅತ್ಯವಶ್ಯಕವಾಗಿದ್ದು, ಈ ದಿಸೆಯಲ್ಲಿ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದು ಕರೆ ನೀಡಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಮಹತ್ತರವಾಗಿದ್ದು, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ವಿದ್ಯಾರ್ಥಿ ಜೀವನ ಸುಗಮವಾಗುತ್ತದೆ. ಈ ದಿಸೆಯಲ್ಲಿ ತಂದೆತಾಯಿ, ಹಿರಿಯರು, ಗುರುಗಳ ಅನುಭವದ ಮಾತುಗಳನ್ನು ಆಲಿಸಬೇಕು. ಅವುಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪೋಷಕರೂ ಕೂಡ ತಮ್ಮ ಮಕ್ಕಳ ಮೇಲಿನ ಜವಾಬ್ದಾರಿಯನ್ನು ಮರೆಯಬಾರದು ಎಂದು ಆಶೀರ್ವಚನ ನೀಡಿದರು. 

ಈ ವೇಳೆ ಬಿ.ಇ ತರಗತಿಗಳ ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಕಂಚಿನ ಪದಕಗಳನ್ನು ನೀಡಿ ಗೌರವಿಸಲಾಯಿತು. ಹಾಗೂ ವಿವಿಧ ವಿಭಾಗಗಳ ನೂರಾರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು. ಅಲ್ಲದೆ, ನಂದಿ ತರಂಗ ಸ್ಮರಣಸಂಚಿಕೆ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ  ಬಿಜಿಎಸ್ ಸಮೂಹ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಎಸ್‍ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಡಾ.ಕೆ.ಪಿ. ಶ್ರೀನಿವಾಸಮೂರ್ತಿ, ದಾಸಪ್ಪಗೌಡ, ಇ.ಆರ್. ಶ್ರೀನಿವಾಸ್, ಅನಿಲ್, ಮುನಿಕೇಂಚೇಗೌಡ ಮತ್ತಿತರರು ಉಪಸ್ಥಿತರಿದ್ದರು. 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News