ಸೆ. 7: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿಯಿಂದ ಬೈಕ್ ರ‍್ಯಾಲಿ
ಮಂಗಳೂರು, ಆ. 23: ರಾಜ್ಯದ ವಿವಿಧ ಕಡೆಗಳಲ್ಲಿ ಸಮಾಜ ಘಾತುಕ ಶಕ್ತಿಗಳಿಂದ 2011ರಿಂದ 11 ಪ್ರಕರಣಗಳಲ್ಲಿ ಹಿಂದುಗಳ ಹತ್ಯೆಯಾಗಿದೆ ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸದೇ ಇರುವ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಯನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಸೆ. 7ರಂದು ಮಂಗಳೂರಿನಲ್ಲಿ ಬೃಹತ್ ಬೈಕ್ ರ‍್ಯಾಲಿಯ ಸಂಗಮ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದ 5 ಕಡೆಗಳಿಂದ ಈ ಬೈಕ್ ರ‍್ಯಾಲಿ ಆರಂಭಗೊಂಡು ಸೆ. 7ರಂದು ಮಂಗಳೂರಿಗೆ ಆಗಮಿಸಲಿದೆ. ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರು ಮೂಲಕ ಒಟ್ಟು ಸುಮಾರು 10 ಸಾವಿರಕ್ಕೂ ಅಧಿಕ ಜನರು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ರ‍್ಯಾಲಿಯಲ್ಲಿ ರಾಜ್ಯ ಬಿಜೆಪಿ ನಾಯಕ ಯಡಿಯೂರಪ್ಪ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಉಸ್ತುವಾರಿ ವಹಿಸಲಿದ್ದಾರೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಲ್ಲಿ ಪಿಎಫ್‌ಐ, ಕೆಎಫ್‌ಡಿಗಳ ಪಾತ್ರವಿದೆ. 2012ರಲ್ಲಿ ಕೇರಳ ಸರಕಾರವೂ ಹೈ ಕೋರ್ಟಿಗೆ ಅಫಿದಾವಿತ್ ನಲ್ಲಿ ಈ ಸಂಘಟನೆ ರಾಷ್ಟ್ರದ ಹಿತಕ್ಕೆ ಹಾನಿಕರವಾಗಿದೆ ಎಂದು ತಿಳಿಸಿತ್ತು. ಕಳೆದ ಹಲವು ವರುಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೊಲೆಗಳಲ್ಲಿ ಈ ಸಂಘಟನೆಗಳ ಪಾತ್ರ ಇರುವುದಾಗಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಹರೀಶ್ ಪೂಂಜಾ, ಶಿವರಂಜನ್, ಸಂದೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.