ಸೆ.6ರಂದು ವಿಧಾನಸಭಾ ಶಾಸಕರಿಂದ ಅಹೋರಾತ್ರಿ ಧರಣಿ
ಬೆಂಗಳೂರು, ಆ.23: ಶಿಕ್ಷಕರ ಮತ್ತು ಶಿಕ್ಷಣ ಕ್ಷೇತ್ರದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಮತ ಕ್ಷೇತ್ರದ ಶಾಸಕರುಗಳಿಂದ ಸೆ.6ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಅರ್ನಿದಿಷ್ಟಾವಧಿವರೆಗೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನಪರಿಷತ್‌ನ ಉಪಾಸಭಾಪತಿ ಮರಿತಿಬ್ಬೇಗೌಡ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ, ಶಿಕ್ಷಕರ ವರ್ಗಾವಣೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳು ತಾಂಡವವಾಡುತ್ತಿದೆ. ಆದರೆ, ರಾಜ್ಯ ಸರಕಾರ ಸಮಸ್ಯೆಗಳ ಪರಿಹಾರದ ಕುರಿತು ಕೇವಲ ಹಾರಿಕೆಯ ಉತ್ತರ ನೀಡುತ್ತಾ ಬಂದಿದೆ ಎಂದು ಅವರು ಆರೋಪಿಸಿದರು.
ಇತ್ತೀಚೆಗೆ ಹುಬ್ಬಳ್ಳಿ ಹಾಗೂ ಬೆಳಗಾವಿ ನಗರದಲ್ಲಿ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಶಾಸಕರು ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಸೌಜನ್ಯಕ್ಕಾದರು ನಮ್ಮಾಂದಿಗೆ ಸಭೆ ಕರೆದಿಲ್ಲ. ಅಷ್ಟರ ಮಟ್ಟಿಗೆ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿಕ್ಷಣ ಕ್ಷೇತ್ರದ ಕುರಿತು ಸರಕಾರ ಸಂಪೂರ್ಣ ಕಡೆಗಣಿಸಿರುವುದನ್ನು ಬೇಸತ್ತು ಅಂತಿಮವಾಗಿ ಸರಕಾರಕ್ಕೆ ಬಿಸಿ ಮುಟ್ಟಿಸಿ ಶಿಕ್ಷಣ ಕ್ಷೇತ್ರದತ್ತ ಗಮನ ಹರಿಸುವಂತೆ ಮಾಡಲು ಅಹೋರಾತ್ರಿ ಧರಣಿಗೆ ಮುಂದಾಗಿದ್ದೇನೆ. ಈ ಧರಣಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪದವೀಧರ ಕ್ಷೇತ್ರದ ಆಯ್ಕೆಯಾದ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪುಟ್ಟಣ್ಣ, ಅರುಣ ಶಹಾಪುರ, ಕೆ.ಟಿ.ಶ್ರೀಕಂಠೇಗೌಡ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರ, ರಮೇಶ್ ಬಾಬು ಉಪಸ್ಥಿತರಿದ್ದರು.
ಸೆ.14ರ ನಂತರ ಶಾಲಾ ಕಾಲೇಜು ಬಂದ್
ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಈಡೇರಿಕೆಗಾಗಿ ಸೆ.6ರಿಂದ ಆಯೋಜಿಸಿರುವ ಆಹೋರಾತ್ರಿ ಧರಣಿಗೆ ಸರಕಾರ ಸೂಕ್ತವಾಗಿ ಸ್ಪಂಧಿಸದಿದ್ದರೆ ಸೆ.14ರ ನಂತರ ರಾಜ್ಯದ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಬಂದ್ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪರಿಷತ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.