ಶಾಲಾ ಕಾಲೇಜುಗಳು ಭಾತೃತ್ವದ ಕೇಂದ್ರಗಳಾಗಿವೆ: ಶ್ರೀನಿವಾಸ್
ಸಾಗರ, ಆ.24: ಶಾಲಾ ಕಾಲೇಜುಗಳು ಭಾತೃತ್ವದ ಕೇಂದ್ರಗಳಾಗಿವೆ. ಅಲ್ಲದೆ, ಎಲ್ಲ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರಿಂದ ಇಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬಹುದು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ತೀ.ನ.ಶ್ರೀನಿವಾಸ್ ತಿಳಿಸಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್ನೆಸ್ಸೆಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆ ಸಹ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾಗಿರುತ್ತದೆ. ಬಹುತೇಕ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಉಳಿಯುತ್ತಾರೆ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ನಗರ ಠಾಣೆ ಸರ್ಕಲ್ ಇನ್ ಸ್ಪೆಪೆಕ್ಟರ್ ಬಿ.ಎಲ್.ಜನಾರ್ದನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಪಾರ ಶಕ್ತಿ ಇರುತ್ತದೆ. ಅದನ್ನು ಅಭಿವ್ಯಕ್ತಗೊಳಿಸಲು ಇಂತಹ ಕ್ರಿಯಾಶೀಲ ಚಟುವಟಿಕೆ ಅಗತ್ಯ. ಕ್ರೀಡೆ ಮಾನಸಿಕ ದೃಢತೆಯನ್ನು ಹೆಚ್ಚಿಸಿದರೆ, ಸಾಂಸ್ಕøತಿಕ ಚಟುವಟಿಕೆ ನಿಮ್ಮಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಉತ್ತೇಜಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಚಿದಂಬರ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಎಸ್.ಎಸ್.ರಮೇಶ್, ಅಫ್ತಾಬ್ ಅಲಿಖಾನ್, ಕುಮಾರಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಜಿ.ಪರಮೇಶ್ವರ್, ಉಪನ್ಯಾಸಕ ಕೆ.ಮಂಜಪ್ಪ ಹಾಜರಿದ್ದರು.