ಭಡ್ತಿ ಮೀಸಲಾತಿ ಸುಗ್ರೀವಾಜ್ಞೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಜಯಚಂದ್ರ
ಬೆಂಗಳೂರು, ಆ. 26: ಎಸ್ಸಿ, ಎಸ್ಟಿ ವರ್ಗದ ನೌಕರರ ಭಡ್ತಿ ಮೀಸಲಾತಿ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಕಾನೂನು ಸಚಿವ ಜಯಚಂದ್ರ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಅಧಿಕಾರಿ ನೌಕರರ ಭಡ್ತಿ ಮೀಸಲಾತಿ ಸಂಬಂಧದ ಸುಗ್ರೀವಾಜ್ಞೆ ಕುರಿತಂತೆ ರಾಜ್ಯಪಾಲರು ಪತ್ರವನ್ನು ವಾಪಸ್ ಕಳುಹಿಸಿದ್ದರು. ರಾಜ್ಯಪಾಲರಿಗೆ ಈ ವಿಚಾರವನ್ನು ಮನವರಿಕೆ ಮಾಡಲಾಗಿದೆ ಎಂದರು.
ಎಸ್ಸಿ-ಎಸ್ಟಿ ಅಧಿಕಾರಿಗಳ ಮುಂಭಡ್ತಿ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಇದರ ತುರ್ತು ಅಗತ್ಯವೇನಿದೆ ಎಂದು ರಾಜ್ಯಪಾಲರು ಕೇಳಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಮತ್ತೊಮ್ಮೆ ಅವರೊಂದಿಗೆ ಮಾತನಾಡಲಿದ್ದೇನೆ ಎಂದು ಹೇಳಿದರು.
ಸದ್ಯದಲ್ಲೇ ಅಧಿವೇಶನ ನಡೆಯುವುದಿಲ್ಲ. ಹೀಗಾಗಿ ಸುಗ್ರೀವಾಜ್ಞೆ ತರಲಾಗುತ್ತಿದೆ ಎಂದು ಮನವರಿಕೆ ಮಾಡಿದ್ದೇನೆ. ಈ ಬಗ್ಗೆ ನಿರ್ದಿಷ್ಟ ಸೂಚನೆ ಕೊಟ್ಟಿಲ್ಲ. ರಾಷ್ಟ್ರೀಯ ಕಾನೂನು ಶಾಲೆಯ ಸಂಬಂಧದ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದರು.