ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬೆಳೆಸಿಕೊಳ್ಳುತ್ತಿರುವುದು ದುರಂತ: ಕೇಶವರೆಡ್ಡಿ
ಚಿಕ್ಕಬಳ್ಳಾಪುರ, ಆ.27: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಲವು ಸೌಲಭ್ಯ ಒದಗಿಸುತ್ತಿದ್ದರೂ, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬೆಳೆಸಿಕೊಳ್ಳುತ್ತಿರುವುದು ದುರಂತ ಎಂದು ಜಿಪಂ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಮಂಚನಬಲೆ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯ 8ನೆ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಿ ಬಳಿಕ ಮಾತನಾಡಿದ ಅವರು, ಸರಕಾರದಿಂದ ಮಧ್ಯಾಹ್ನ ಬಿಸಿಯೂಟ, ಹಾಲು, ಸಮವಸ್ತ್ರ, ಶೂ, ಬೈಸಿಕಲ್ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ವಿತರಿಸಲಾಗುತ್ತಿದೆ. ಅಲ್ಲದೆ ಗುಣಮಟ್ಟದ ಶಿಕ್ಷಣಕ್ಕೂ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಇಷ್ಟೆಲ್ಲಾ ಸೌಲಭ್ಯ ಇದ್ದರೂ, ಪಾಲಕರು ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುತ್ತಿರುವುದು ವಿಪರ್ಯಾಸವಾಗಿದೆ ಎಂದರು.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು, ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕಿದೆ. ಅಲ್ಲದೆ ಮಹನೀಯರ ಆದರ್ಶ ಮೈಗೂಡಿಸಿಕೊಂಡು ಮುನ್ನಡೆಯುವ ಜೊತೆಗೆ ಉನ್ನತ ಶಿಕ್ಷಣ ಪಡೆಯುವ ಮೂಲಕ ಉನ್ನತ ಸ್ಥಾನ ಅಲಂಕರಿಸಿ, ಪೋಷಕರಿಗೆ ಹಾಗೂ ನಾಡಿಗೆ ಗೌರವ ಸಲ್ಲಿಸಬೇಕೆಂದು ತಿಳಿಸಿದರು.
ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಮೊದಲು ದೈಹಿಕ, ಮಾನಸಿಕ ಆರೋಗ್ಯದ ಸದೃಢತೆಯನ್ನು ಕಾಯ್ದುಕೊಳ್ಳಬೇಕು. ಪೌಷ್ಠಿಕ ಆಹಾರ ಸೇವನೆ ಜೊತೆಗೆ ಯೋಗ, ವ್ಯಾಯಾಮ, ವಿಶ್ರಾಂತಿ ಪಡೆದು ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು. ಆಗ ವಿದ್ಯೆಯು ತಾನಾಗಿಯೇ ಒಲಿಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಪಂ ಮಾಜಿ ಅಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಮಹತ್ತರವಾಗಿದ್ದು, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ವಿದ್ಯಾರ್ಥಿ ಜೀವನ ಸುಗಮವಾಗುತ್ತದೆ. ಈ ದಿಸೆಯಲ್ಲಿ ತಂದೆತಾಯಿ, ಹಿರಿಯರು, ಗುರುಗಳ ಅನುಭವದ ಮಾತುಗಳನ್ನು ಆಲಿಸಬೇಕು. ಅವುಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪೋಷಕರೂ ಕೂಡ ತಮ್ಮ ಮಕ್ಕಳ ಮೇಲಿನ ಜವಾಬ್ದಾರಿಯನ್ನು ಮರೆಯಬಾರದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಇಸ್ಮಾಯೀಲ್, ಮುಖಂಡರಾದ ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ವೆಂಕಟೇಶಪ್ಪ, ಎಸ್.ಪಿ. ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.