ಶ್ರೀರಂಗ ಏತ ನೀರಾವರಿ ಯೋಜನೆ ಅನುಷ್ಠಾನ: ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು, ಆ.28: ಶ್ರೀರಂಗ ಏತ ನೀರಾವರಿ ಯೋಜನೆಯಡಿಯಲ್ಲಿ ಮಾಗಡಿ ಹಾಗೂ ಕುಣಿಗಲ್ ತಾಲೂಕಿನ 289 ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶ್ರೀರಂಗ ಏತ ನೀರಾವರಿ ಯೋಜನೆ ಅನುಷ್ಠಾನ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 324 ಕೋಟಿ ರೂ.ವೆಚ್ಚದ ಶ್ರೀರಂಗ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ 324 ಕಿ.ಮೀ ಕಾಲುವೆ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೆ ಕಾಮಗಾರಿ ಆರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಕಾಮಗಾರಿಗೆ ಹಿನ್ನಡೆಯುಂಟಾಗಿತ್ತು. ಡಿಸೆಂಬರ್ ವೇಳೆಗೆ ಎಲ್ಲ ಅಡೆತಡೆಗಳನ್ನು ನಿವಾರಿಸಲಾಗುವುದು. ಈ ಯೋಜನೆಗೆ ಹೆಚ್ಚುವರಿ ಹಣ ಒದಗಿಸಲು ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ ಎಂದರು.
ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ಸಿ.ಎಂ.ಲಿಂಗಪ್ಪ, ಎಸ್.ರವಿ ಹಾಗೂ ರಾಮನಗರ, ತುಮಕೂರು ಜಿಲ್ಲೆಯ ಅಧಿಕಾರಿಗಳು ಭಾಗವಹಿಸಿದ್ದರು.