ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡರೆ ಉತ್ತಮ ಬದುಕು

Update: 2017-09-01 09:02 GMT
ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಾನಪದ ವಿದ್ವಾಂಸ ಕೆ.ಚಿನ್ನಪ್ಪ ಗೌಡ ಅವರನ್ನು ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಕೊಣಾಜೆ, ಸೆ.1: ಬದುಕಿನಲ್ಲಿ ಎದುರಾಗುವ ಕವಲು ದಾರಿಗಳಲ್ಲಿ ಜಾಗರೂಕತೆಯಿಂದ ನಮ್ಮ ಆಯ್ಕೆಗಳನ್ನು ನಿರ್ವಹಿಸುತ್ತಾ, ನಮ್ಮ ಆಯ್ಕೆಯನ್ನು ಗೌರವಿಸುತ್ತಾ ಎದುರಾದ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡಲ್ಲಿ ಯಶಸ್ಸು ಸಾಧ್ಯ ಎಂದು ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ಕೆ.ಚಿನ್ನಪ್ಪಗೌಡ ಹೇಳಿದ್ದಾರೆ.

ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ನಿವೃತ್ತಿ ಹೊಂದುತ್ತಿರುವ ಸಂದರ್ಭ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ನೀಡಿದ ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಬದುಕಿನಲ್ಲಿ ಬಡತನ ಎಂಬುದು ಶಾಪವಲ್ಲ. ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡು ಜೀವನದಲ್ಲಿ ಮುನ್ನಡೆದರೆ ನೆಮ್ಮದಿಯುತ ಬದುಕನ್ನು ಕಂಡುಕೊಳ್ಳಲು ಸಾಧ್ಯ ಎಂದರು.

ಸಮಾರಂಭದಲ್ಲಿ ಒಡನಾಟದ ನೆನಪುಗಳನ್ನು ಹಂಚಿಕೊಂಡ ಪ್ರೊ.ಕೆ.ಅಭಯಕುಮಾರ್, ಪ್ರೊ.ಚಿನ್ನಪ್ಪಗೌಡ ಮಂಗಳೂರು ವಿಶ್ವವಿದ್ಯಾನಿಲಯದ ತಮ್ಮ ನಿಡುಗಾಲದ ಸೇವೆಯಲ್ಲಿ ಉತ್ತಮ ಅಧ್ಯಾಪಕರಾಗಿ, ಸಂಶೋಧಕರಾಗಿ, ಆಡಳಿತಗಾರರಾಗಿ, ವಿದ್ಯಾರ್ಥಿ ಸ್ನೇಹಿಗಳಾಗಿದ್ದರು ಎಂದರು.

ಪ್ರೊ.ಬಿ.ಶಿವರಾಮ ಶೆಟ್ಟಿ, ಡಾ.ನಾಗಪ್ಪ ಗೌಡ, ಡಾ.ಧನಂಜಯ ಕುಂಬ್ಳೆ, ಡಾ.ರಾಜಶ್ರೀ ಸಮಾರಂಭದಲ್ಲಿ ಮಾತನಾಡಿದರು.

ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಸೋಮಣ್ಣ ಅವರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ವಿಭಾಗದ ಹಿರಿಯ ವಿದ್ಯಾರ್ಥಿಗಳು, ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News