ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಆದೇಶ
ಹೊಸದಿಲ್ಲಿ, ಸೆ.5 ಕಳೆದ ವರ್ಷ ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ ಗಣಪತಿ ಪ್ರಕರಣವನ್ನು ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ.
ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಹಾಗೂ ಪ್ರಣಬ್ ಮೊಹಂತಿ ಅವರ ವಿಚಾರಣೆ ನಡೆಸಿ ಮೂರು ತಿಂಗಳಿನೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಸೂಚಿಸಿದೆ.
ಎಂ.ಕೆ.ಗಣಪತಿ ಅವರು ಕಳೆದ ವರ್ಷ ಜುಲೈ 7ರಂದು ಮಡಿಕೇರಿ ವಿನಾಯಕ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ “ ನನ್ನ ಸಾವಿಗೆ ಸಚಿವ ಕೆ.ಜೆ. ಜಾರ್ಜ್, ಐಜಿಪಿ ಪ್ರಣವ್ ಮೊಹಂತಿ, ಎಡಿಜಿಪಿ ಎಎಂ ಪ್ರಸಾದ್ ಕಾರಣ “ಎಂದು ಆರೋಪಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಗಣಪತಿ ಅವರ ತಂದೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಮಾಚಯ್ಯ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ನಿರಾಕರಿಸಿತ್ತು. ಇದರಿಂದಾಗಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಪುರಸ್ಕರಿಸಿ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಸಿಬಿಐ ತನಿಖೆಗೆ ಜಾರ್ಜ್ ಸ್ವಾಗತ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಐಡಿ ತನಿಖೆಗೆ ಸಹಕರಿಸಿದ್ದೇನೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಈಗ ಸಿಬಿಐ ತನಿಖೆ ನಡೆಸುವುದರಿಂದ ಮತ್ತೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನನ್ನ ರಾಜೀನಾಮೆಯನ್ನು ಕೇಳುತ್ತಿದ್ದಾರೆ. ಅವರ ವಿರುದ್ಧವು ಹಲವು ಪ್ರಕರಣಗಳಿವೆ. ಅವರು ರಾಜೀನಾಮೆ ನೀಡಿದ್ದಾರೆಯೇ.
-ಕೆ.ಜೆ.ಜಾರ್ಜ್, ಬೆಂಗಳೂರು ಅಭಿವೃದ್ಧಿ ಸಚಿವ
'ಸುಪ್ರೀಂ' ಆದೇಶ ಕೈ ಸೇರಿಲ್ಲ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿದೆ. ನ್ಯಾಯಾಲಯ ನೀಡಿರುವ ಆದೇಶದ ಪ್ರತಿ ಇನ್ನೂ ಕೈ ಸೇರಿಲ್ಲ. ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಸಿಐಡಿ ತನಿಖಾ ತಂಡ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಆ ವರದಿಯನ್ನು ನ್ಯಾಯಾಲಯ ತಿರಸ್ಕರಿಸಿದೆಯೆ ಅಥವಾ ಪ್ರಕರಣ ಮರು ತನಿಖೆಗೆ ಆದೇಶ ನೀಡಿದೆಯೆ ಎಂಬುದು ಗೊತ್ತಿಲ್ಲ. ಆದೇಶದ ಪ್ರತಿ ಕೈ ಸೇರಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಜಾರ್ಜ್ ರಾಜೀನಾಮೆ ನೀಡಲಿ
ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಮಾನ ಸ್ವಾಗತಾರ್ಹ. ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸಚಿವ ಕೆ.ಜೆ.ಜಾರ್ಜ್ ತಕ್ಷಣವೇ ರಾಜೀನಾಮೆ ನೀಡಬೇಕು.
-ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಸಿಬಿಐ ನಿಷ್ಪಕ್ಷಪಾತ ತನಿಖೆ ಮಾಡಲಿ
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರಕಾರ ಕಾಟಾಚಾರದ ತನಿಖೆ ನಡೆಸಿ ಗಣಪತಿ ಕುಟುಂಬಕ್ಕೆ ಅನ್ಯಾಯ ಮಾಡಿತ್ತು. ಈ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸುವ ವೇಳೆ ನಾನು ಪ್ರಸ್ತಾಪಿಸಿದ ಪ್ರಮುಖ ಅಂಶಗಳನ್ನೆ ಸುಪ್ರೀಂಕೋರ್ಟ್ ಎತ್ತಿ ಹಿಡಿದು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದೆ. ಸಿಬಿಐ ಕಾಲಹರಣ ಮಾಡದೆ, ನಿಷ್ಪಕ್ಷಪಾತವಾದ ತ್ವರಿತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ. ಸುಪ್ರೀಂಕೋರ್ಟ್‌ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆ ದುಪ್ಪಟ್ಟುಗೊಳಿಸಿದೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಎಫ್‌ಐಆರ್ ಹಾಕಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೆ. ಯಾವುದೇ ಒತ್ತಡಗಳಿಗೆ ಮಣಿಯದೆ ಸಿಬಿಐ ಗಣಪತಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಲಿ.
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ