ಅರ್ಜಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಸೆ.8: ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆಯ (ರೇರಾ) ವ್ಯಾಪ್ತಿಯಿಂದ ಗೃಹ ನಿರ್ಮಾಣ ಸಹಕಾರ ಸಂಘಗಳನ್ನು ಹೊರಗಿಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಸಹಕಾರ ಸಂಘಗಳಿಗೆ ರೇರಾ ನಿಯಮಗಳು ಅನ್ವಯವಾಗದ ಕಾರಣ ಅವುಗಳನ್ನು ರೇರಾ ವ್ಯಾಪ್ತಿಯಿಂದ ಹೊರಗಿಡಲು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಸೇರಿದಂತೆ 14 ಗೃಹ ನಿರ್ಮಾಣ ಸಹಕಾರ ಸಂಘಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರಿದ್ದ ಪೀಠದಲ್ಲಿ ನಡೆಯಿತು.
ಈ ವೇಳೆ ಹಾಜರಿದ್ದ ಕೇಂದ್ರ ಸರಕಾರದ ಪರ ವಕೀಲರು, ರೇರಾ ಕಾಯ್ದೆ ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 20ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್ ಅಥವಾ ಯಾವುದಾದರೂ ಒಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ಅರ್ಜಿ ಸಲ್ಲಿಸಿದೆ. ಈ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ಕುರಿತು ವಿವಿಧ ಹೈಕೋರ್ಟ್‌ಗಳಲ್ಲಿ ದಾಖಲಾಗಿರುವ ಅರ್ಜಿಗಳ ವಿಚಾರಣೆಗೆ ತಡೆ ನೀಡಿದೆ. ಹೀಗಾಗಿ ಅರ್ಜಿಯ ಕುರಿತು ಯಾವುದೇ ಆದೇಶ ನೀಡದಂತೆ ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಕೇಂದ್ರ ಸರಕಾರದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಏನು ತೀರ್ಪು ನೀಡುತ್ತದೆ ಕಾದು ನೋಡೋಣವೆಂದು ತಿಳಿಸಿ ಅರ್ಜಿಗಳ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತು. ಒಂದೊಮ್ಮೆ ಹೈಕೋರ್ಟ್ ವಿಚಾರಣೆಗೆ ನೀಡಿರುವ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದಲ್ಲಿ, ಅರ್ಜಿ ವಿಚಾರಣೆ ಕೈಗೆತ್ತುಕೊಳ್ಳುವಂತೆ ಅರ್ಜಿದಾರರು ನ್ಯಾಯಪೀಠಕ್ಕೆ ಮನವಿ ಸಲ್ಲಿಸಬಹುದು ಎಂದು ಇದೇ ವೇಳೆ ನ್ಯಾಯಪೀಠ ಸ್ಪಷ್ಟಪಡಿಸಿದೆ.