ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ: ಡಾ.ಪರಮೇಶ್ವರ್
ಬೆಂಗಳೂರು, ಸೆ.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇರಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್, ಜೆಡಿಎಸ್‌ನೊಂದಿಗೆ ಕೈಜೋಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ನೂತನ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ತಾನು ಸಮಾಲೋಚನೆ ನಡೆಸಲಿದ್ದೇನೆ ಎಂದರು.
ಆನಂತರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಲಿದ್ದೇನೆ. ಆ ಬಳಿಕ ಬಿಬಿಎಂಪಿಯ ಮೇಯರ್ ಮತ್ತು ಉಪ ಮೇಯರ್ ಸ್ಥಾನ ಯಾವ ಪಕ್ಷಕ್ಕೆ ನೀಡಬೇಕು ಎಂಬ ಕುರಿತು ತೀರ್ಮಾ ಕೈಗೊಳ್ಳಲಾಗುವುದು ಎಂದರು.
ಬಿಎಸ್‌ವೈ ಬಾಲಿಶ ಹೇಳಿಕೆ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತನಿಖೆಗೆ ಒಳಪಡಿಸಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬಾಲಿಶತನದ್ದು.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಯಡಿಯೂರಪ್ಪ ಅವರಿಂದು ತಾನು ಇಂಥ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಿಟ್ ತನಿಖೆ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ಬಿಎಸ್‌ವೈ ಮನಸ್ಸು ಇಚ್ಛೆ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.