ಅರಣ್ಯ ಸಂರಕ್ಷಣೆ ಇಂದಿನ ಬಹುದೊಡ್ಡ ಸವಾಲು: ಗಣೇಶ್ ಭಟ್
ಉಡುಪಿ, ಸೆ.11: ದೇಶದ ಅಮೂಲ್ಯ ಸಂಪತ್ತನ್ನು ಅರಣ್ಯ ಸಿಬ್ಬಂದಿಗಳು ದಿನದ 24 ಗಂಟೆಗಳ ಕಾಲವೂ ಕಾಯುತ್ತಿದ್ದಾರೆ. ಇದು ಇಂದು ನಮ್ಮ ಮುಂದೆ ಇರುವ ದೊಡ್ಡ ಸವಾಲು ಆಗಿದೆ. ಅರಣ್ಯ ಸಂರಕ್ಷಣೆಗಾಗಿ ಈವರೆಗೆ ರಾಜ್ಯದಲ್ಲಿ 44 ಅರಣ್ಯ ಸಿಬ್ಬಂದಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಎಸ್.ಭಟ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ ಉಡುಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹ ಯೋಗದೊಂದಿಗೆ ಅರಣ್ಯ ಹುತಾತ್ಮರ ಸ್ಮರಣಾರ್ಥ ಸೋಮವಾರ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮಾತನಾಡಿ, ಈಗಾಗಲೇ ನೇಮಕ ಮಾಡಲಾಗಿರುವ ರಾಜ್ಯ ಆರನೆ ವೇತನ ಆಯೋಗವು ಈ ತಿಂಗಳ ಕೊನೆಯೊಳಗೆ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಿದ್ದು, ಇದನ್ನು ಅಕ್ಟೋಬರ್ ಎರಡನೆ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸರಕಾರಿ ನೌಕರರ ಸಮ್ಮೇಳನದಲ್ಲಿ ಯಥಾವತ್ತಾಗಿ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಅಡಿಗ, ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ಅಚ್ಚಪ್ಪ, ರಾಜ್ಯ ಅರಣ್ಯ ರಕ್ಷಕರು ಮತ್ತು ವೀಕ್ಷಕರ ಸಂಘದ ಕುಂದಾಪುರ ವಿಭಾಗ ಅಧ್ಯಕ್ಷ ಆನಂದ ಬಳೇಗಾರ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮುಡೂರ ಕೊಠಾರಿ ವಹಿಸಿದ್ದರು.
ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್‌ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರಣ್ಯ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ನಾಗೇಶ ಬಿಲ್ಲವ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಕರುಣಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.