×
Ad

ವಿಧಾನಸಭಾ ಚುನಾವಣೆಗೆ ಜೆಡಿಎಸ್ ಸಜ್ಜು: ಎಚ್.ಡಿ.ದೇವೇಗೌಡ

Update: 2017-09-12 20:29 IST

ಬೆಂಗಳೂರು, ಸೆ.12: ರಾಜ್ಯದಲ್ಲಿ ನಡೆಯುವ ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸಜ್ಜಗೊಂಡಿದ್ದು, ಪ್ರತಿ ವಾರ್ಡ್, ಹೋಬಳಿ ಮಟ್ಟದಿಂದಲೇ ಪಕ್ಷವನ್ನು ಬಲವರ್ಧನೆಗೊಳಿಸಲಾಗುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

  ಮಂಗಳವಾರ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಶಾಸಕಾಂಗ ಹಾಗೂ ನೂತನವಾಗಿ ಆಯ್ಕೆಯಾಗಿರುವ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು.

 ಪ್ರತಿ ಕ್ಷೇತ್ರದಲ್ಲೂ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಇದನ್ನು ಆ ಭಾಗಕ್ಕೆ ಸಂಬಂಧಿಸಿದ ಜೆಡಿಎಸ್ ಮುಖಂಡರು ನೇತೃತ್ವದ ವಹಿಸಲಿದ್ದಾರೆ. ರಾಜ್ಯದ 30ಜಿಲ್ಲೆಗಳಲ್ಲೂ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಹದಿನೈದು ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ಬಗ್ಗೆ ಮಾಹಿತಿ ನೀಡಬೇಕೆಂದು ಅವರು ಸೂಚಿಸಿದರು.

ಜೆಡಿಎಸ್‌ನಿಂದ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಹಲವು ವಿಷಯಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಎಲ್ಲ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಂಡು ಸಂಘಟನೆಯೊಂದಿಗೆ ಮುನ್ನಡೆಯುತ್ತೇವೆ. ಇದರಲ್ಲಿ ಎಲ್ಲ ಜಾತಿಗಳಿಗೂ ಸಮಾನ ಅವಕಾಶವಿರುತ್ತದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪರವಾದ ಅಲೆ ರಾಜ್ಯಾದ್ಯಂತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿರೀಕ್ಷೆಗೂ ಮೀರಿದ ಸ್ಥಾನಗಳನ್ನು ಬಾಚಿಕೊಳ್ಳಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕ ಸುರೇಶ್‌ಬಾಬು, ಗೋಪಾಲಯ್ಯ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News