ರಾಜ್ಯ ಸರಕಾರ 1300 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದೆ: ಹೈಕೋರ್ಟ್‌ಗೆ ಬಿಎಸ್‌ವೈ ಪರ ವಕೀಲರ ಹೇಳಿಕೆ

Update: 2017-09-12 16:22 GMT

ಬೆಂಗಳೂರು, ಸೆ.12: ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.13ಕ್ಕೆ ಮುಂದೂಡಿದೆ. ಅಲ್ಲದೆ, ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೆ 1300 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದು, ಆ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ಬಿಎಸ್‌ವೈ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎರಡು ಎಫ್‌ಐಆರ್‌ಗಳ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು. ಅಲ್ಲದೆ, ಬಿಎಸ್‌ವೈ ಪರ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ 257 ಎಕರೆ 20.5 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲು ಆದೇಶಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಎರಡು ಎಫ್‌ಐಆರ್ ದಾಖಲಿಸಿದೆ. ಹಾಗೆಯೇ ರಾಜ್ಯ ಸರಕಾರ ಕೂಡ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೆ 1300 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದು, ಆ ದಾಖಲೆಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಹೇಳಿದರು.

 ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ ಎಫ್‌ಐಆರ್‌ಗೆ ತಡೆ ನೀಡಲು ಬರುವುದಿಲ್ಲ ಎಂದು ಎಸಿಬಿ ಪರ ವಕೀಲರು ನ್ಯಾಯಪೀಠಕ್ಕೆ ಹೇಳುತ್ತಾರೆ. ಆದರೆ, ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬೇರೆ ರಾಜ್ಯಗಳ ಕೋರ್ಟ್‌ಗಳು ಎಫ್‌ಐಆರ್‌ಗೆ ತಡೆ ನೀಡಿವೆ ಎಂದು ಪೀಠಕ್ಕೆ ತಿಳಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ವಶಪಡಿಸಿಕೊಂಡಿದ್ದ ಜಮೀನಿನ ಪೈಕಿ 257 ಎಕರೆ 20.5 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲು ಅಕ್ರಮವಾಗಿ ಆದೇಶಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಬಿಎಸ್‌ವೈ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News