ಶಾಲೆಗಳಿಗೆ ಪ್ರತೀ ದಿನ ಪೊಲೀಸ್ ಸಿಬ್ಬಂದಿ ಭೇಟಿ ಅಗತ್ಯ: ವಿ.ಎಸ್.ಉಗ್ರಪ್ಪ
ಬೆಂಗಳೂರು, ಸೆ.14: ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಶಾಲೆಗಳಿಗೂ ಪ್ರತೀ ದಿನ ಪೊಲೀಸ್ ಸಿಬ್ಬಂದಿಯೊಬ್ಬರು ಭೇಟಿ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಅತ್ಯಾಚಾರ ನಿಯಂತ್ರಣ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಹಿಂಸೆ ಸೇರಿದಂತೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲ ಶಾಲೆಗಳಿಗೂ ಪ್ರತಿ ದಿನ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಲು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ವರದಿ ನೀಡಿದ್ದೇನೆ ಎಂದು ತಿಳಿಸಿದರು.
ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಒಟ್ಟಿಗೆ ವಿದ್ಯಾರ್ಥಿಗಳ ರಕ್ಷಣೆಯ ಕುರಿತು ಗಂಭೀರವಾಗಿ ಚಿಂತಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕೆ ಅನುವಾಗುವಂತೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಕನಿಷ್ಠ ತಿಂಗಳಿಗೊಂದು ಸಭೆ ನಡೆಸಬೇಕು. ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಾಗ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಅಗತ್ಯ ಹಾಗೂ ಸಮಸ್ಯೆಗಳು ಕುರಿತು ಪರಿಶೀಲಿಸಬೇಕು ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ: ಕಳೆದ ಮಂಗಳವಾರ ನಗರದ ಬಾಗಲಕುಂಟೆಯಲ್ಲಿರುವ ಸೈಂಟ್ ಮೇರಿ ಶಾಲೆಯಲ್ಲಿ ಎಲ್‌ಕೆಜಿ ವಿದ್ಯಾರ್ಥಿನಿಯ ಮೇಲೆ ಶಾಲಾ ಭದ್ರತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ನಡೆಸಲಾಗಿರುವ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಭದ್ರತಾ ಏಜೆನ್ಸಿ ವಿರುದ್ಧ ಪ್ರಕರಣ ದಾಖಲಿಸದೆ ಪೊಲೀಸ್ ಇಲಾಖೆ ತಪ್ಪು ಮಾಡಿದೆ ಎಂದು ವಿ.ಎಸ್.ಉಗ್ರಪ್ಪ ಆರೋಪಿಸಿದರು.
ಶಾಲೆಯ ಆಡಳಿತ ಮಂಡಳಿ ತನ್ನ ಶಾಲೆಗೆ ಭದ್ರತಾ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವಾಗ ಆ ವ್ಯಕ್ತಿಯ ಪೂರ್ವಾಪರಗಳನ್ನು ಪರಿಶೀಲಿಸಿ, ಪೊಲೀಸರಿಂದ ಅರ್ಹತಾ ಪತ್ರ ಪಡೆಯಬೇಕೆಂಬ ನಿಯಮವಿದೆ. ಆದರೂ ಶಾಲೆಯ ಆಡಳಿತ ಮಂಡಳಿ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೆ ಮುಂದಿನ ದಿನಗಳಲ್ಲಿ ಎಲ್ಲ ಶಾಲೆಗಳ ಆಡಳಿತ ಮಂಡಳಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗುತ್ತದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಸೇರಿದಂತೆ ರಾಜ್ಯದಲ್ಲಿರುವ ಯಾವ ವಸತಿ ಶಾಲೆಗಳು ಅಧಿಕೃತವಾಗಿ ನಡೆಯುತ್ತಿಲ್ಲ. ಒಂದು ವಸತಿ ಶಾಲೆ ನಡೆಸಲು ಸರಕಾರ ಸೂಚಿಸಿರುವ ಕನಿಷ್ಠ ನಿಯಮಗಳನ್ನು ಅನುಸರಿಸುತ್ತಿಲ್ಲ. ಹೀಗಾಗಿ ಸರಕಾರ ಕಾನೂನು ಉಲ್ಲಂಘಿಸಿರುವ ವಸತಿ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆಯ ಸಂದೇಶ ರವಾನಿಸಬೇಕಾಗಿದೆ.
-ವಿ.ಎಸ್.ಉಗ್ರಪ್ಪ ಅಧ್ಯಕ್ಷ, ಮಹಿಳಾ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣ ಸಮಿತಿ